Karnataka Rains: ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

| Updated By: ರಮೇಶ್ ಬಿ. ಜವಳಗೇರಾ

Updated on: Jul 26, 2023 | 7:02 AM

ಕರ್ನಾಟಕದ ಬಹುತೇಕ ಎಲ್ಲಾ ಕಡೆ ಕಳೆದ ಐದಾರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲ್ಲಿ ರಾಜ್ಯ ಹಲವು ಜಿಲ್ಲೆಗಳಲ್ಲಿ ಇಂದು (ಜುಲೈ 26) ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹಾಗಾದ್ರೆ, ಯಾವೆಲ್ಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎನ್ನುವ ವಿವರ ಇಲ್ಲಿದೆ ನೋಡಿ.

Karnataka Rains: ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
Image Credit source: PTI
Follow us on

ಮಂಗಳೂರು, ಜುಲೈ 25:  ಕರ್ನಾಟಕದಲ್ಲಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೇ ಮುಂದಿನ 24 ಗಂಟೆಗಳಲ್ಲಿ ಸಹ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಇಂದು (ಜುಲೈ 26) ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಯಾವೆಲ್ಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಸಲಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಮುಂದುವರಿಕೆ

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಕಾರಣ ಮುನ್ನೆಚ್ಚರಿಕೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ, ಶಾಲಾ ಮತ್ತು ಕಾಲೇಜುಗಳಿಗೆ ಕಳೆದ ಮೂರು ದಿನಗಳಿಂದ ರಜೆ ನೀಡಲಾಗಿದೆ. ಇಂದು ಸಹ ರಜೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಗಳಿಗೂ ರಜೆ ಘೋಷಿಸಿದ್ದು, ಕಾಲೇಜಿಗೆ ಬರಲಾಗದ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸುವಂತೆ ಸೂಚನೆ ನೀಡಿದ್ದಾರೆ. ಇದರ ಜೊತೆಗೆ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಮಳೆ ತಂದ ಅವಾಂತರ: ಹಾವೇರಿಯಲ್ಲಿ ಮನೆ ಕುಸಿದು ಗಾಯಗೊಂಡಿದ್ದ ಮಗು ಸಾವು

ಕೊಡಗು, ಉಡುಪಿ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ. ಅದೇ ರೀತಿ, ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಡಳಿತವು ಆದೇಶಿಸಿದೆ. ಇದು ಸತತ ಮೂರನೇ ರಜೆಯಾಗಿದೆ. ಪದವಿ ಕಾಲೇಜು ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.

ಉತ್ತರ ಕನ್ನಡದ 4 ತಾಲೂಕಿಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾರವಾರ, ಜೋಯಿಡಾ, ದಾಂಡೇಲಿ, ಹಳಿಯಾಳ ತಾಲೂಕಿನ ಶಾಲೆ ಮತ್ತು ಪದವಿಪೂರ್ವ ಕಾಲೇಜಿಗೆ ರಜೆ ಘೋಷಿಸಿ ಡಿಸಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ.

ಬೆಳಗಾವಿಯ ಶಾಲೆಗಳಿಗೆ ರಜೆ

ಬೆಳಗಾವಿ: ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದ ಹಿನ್ನೆಲೆ ಬೆಳಗಾವಿ ತಾಲೂಕು, ಬೆಳಗಾವಿ ನಗರ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವ್ಯಾಪಕ ಮಳೆಯಾಗುತ್ತಿರುವ ಜಿಲ್ಲೆಯ ಆರು ತಾಲೂಕಿನ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಖಾನಾಪುರ ತಾಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶಿಸಿದ್ದಾರೆ.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ 2 ದಿನ ರಜೆ ಘೋಷಣೆ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನಿರಂತರ ಮಳೆ‌ಯಾಗುತ್ತಿದೆ. ನಾಳೆಯೂ ಮುಂದುವರಿಯುವ ಸಾಧ್ಯತೆ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಜುಲೈ 26 ಮತ್ತು 27 ರಂದು ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ಕಲಬುರಗಿಯಲ್ಲೂ ರಜೆ

ಇನ್ನು ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿರುವ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಕಲಬುರಗಿ ಜಿಲ್ಲಾಧಿಕಾರಿ ಡಿಸಿ ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಹಾಸನದ 5 ತಾಲೂಕುಗಳಲ್ಲಿ ರಜೆ

ಹಾಸನ ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಹಾಸನ ತಾಲೂಕಿನಾದ್ಯಂತ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Tue, 25 July 23