ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ: 7 ಮಂದಿ ಸಾವು
ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತಗಳಲ್ಲಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಶಿಡ್ಲಘಟ್ಟ ಸಮೀಪ ಹೂವು ಕಟಾವಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಓಮ್ನಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಮಹಿಳೆಯರು ಪ್ರಾಣ ಕಳೆದುಕೊಂಡರೆ, ಕೆಜಿಎಫ್ ಎಕ್ಸ್‌ಪ್ರೆಸ್‌ವೇಯಲ್ಲಿ ತಿರುಪತಿಯಿಂದ ಹಿಂತಿರುಗುತ್ತಿದ್ದಾಗ ಕಾರು ಪಲ್ಟಿಯಾಗಿ ಬೆಂಗಳೂರಿನ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಖ್ಯಾಂಶಗಳು
- ಕರ್ನಾಟಕದಲ್ಲಿ ಸಂಭವಿಸಿದ ಎರಡು ಅಪಘಾತಗಳಲ್ಲಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.
- ಶಿಡ್ಲಘಟ್ಟದಲ್ಲಿ ಓಮ್ನಿ-ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ.
- ಕೆಜಿಎಫ್ ಬಳಿ ಕಾರು ಪಲ್ಟಿಯಾಗಿ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 07: ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತಗಳಲ್ಲಿ ಒಟ್ಟು ಏಳು ಮಂದಿ ಕ್ರೂರವಾಗಿ ಮೃತಪಟ್ಟಿದ್ದಾರೆ. ಹೂವು ಕಟಾವಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಓಮ್ನಿ ಕಾರು ಮಿನಿ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿ ಮೂವರು ಮಹಿಳೆಯರು ಪ್ರಾಣ ಕಳೆದುಕೊಂಡರೆ, ತಿರುಪತಿ ದರ್ಶನ ಮುಗಿಸಿ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಸಂಭವಿಸಿದ ಕಾರು ಪಲ್ಟಿ ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಓಮ್ನಿ-ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ, ಮೂವರು ಮಹಿಳೆಯರ ಸಾವು
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಸಮೀಪ ಓಮ್ನಿ ಕಾರು ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಲ್ಲಿಕಾರ್ಜುನಪುರ ಗ್ರಾಮದ 10 ಮಂದಿ ಕೂಲಿ ಕಾರ್ಮಿಕರನ್ನು ಹೂವು ಕಟಾವು ಮಾಡಲು ರಾಮಚಂದ್ರಪ್ಪ ಎಂಬುವವರು ಓಮ್ನಿ ಕಾರಿನಲ್ಲಿ ಹುಜುಗೂರು ಗ್ರಾಮಕ್ಕೆ ಕರೆದೊಯ್ಯುತ್ತಿದ್ದಾಗ ಈ ದುರಂತ ನಡೆದಿದೆ. ಅಪಘಾತದಲ್ಲಿ ಮಲ್ಲಿಕಾರ್ಜುನಪುರ ಮೂಲದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಪಲ್ಟಿ, ನಾಲ್ವರು ದುರ್ಮರಣ
ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ತಿರುಪತಿಯಿಂದ ದರ್ಶನ ಮುಗಿಸಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ದೇವೇಂದ್ರ ಕುಮಾರ್ (40), ಜಿಷ್ಣು (15), ದೀಕ್ಷಿತಾ (20) ಮತ್ತು ಶಾರದಾಬಾಯಿ (70) ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:11 am, Mon, 7 September 26




