Karnataka Budget 2024​​: ಮಂಡ್ಯ ಮೈಶುಗರ್‌ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ, ಹೊಸ ಕೈಗಾರಿಕಾ ನೀತಿ ಜಾರಿಗೆ ನಿರ್ಧಾರ

|

Updated on: Feb 16, 2024 | 2:32 PM

Karnataka Siddaramaiah Budget 2024-25: ಮಂಡ್ಯದ ಮೈಶುಗರ್‌ ಕಾರ್ಖಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸಿದ 2024-25ನೇ ಸಾಲಿನ ಬಜೆಟ್​ನಲ್ಲಿ ತಿಳಿಸಿದ್ದಾರೆ.

Karnataka Budget 2024​​: ಮಂಡ್ಯ ಮೈಶುಗರ್‌ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ, ಹೊಸ ಕೈಗಾರಿಕಾ ನೀತಿ ಜಾರಿಗೆ ನಿರ್ಧಾರ
ಸಿದ್ದರಾಮಯ್ಯ ಬಜೆಟ್​ 2024
Follow us on

ಬೆಂಗಳೂರು, ಫೆಬ್ರವರಿ 16: ಮಂಡ್ಯದ ಮೈಶುಗರ್‌ ಕಾರ್ಖಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸಭೆಯಲ್ಲಿ ಮಂಡಿಸಿದ 2024-25ನೇ ಸಾಲಿನ ಬಜೆಟ್​ (Karnataka Budget 2024) ನಲ್ಲಿ ತಿಳಿಸಿದರು. ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಸರ್ಕಾರದ ಅನುದಾನ, ಇತರೆ ಮೂಲಗಳು ಹಾಗೂ ಕಾರ್ಖಾನೆಯ Asset Monetisation ಮೂಲಕ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು ಎಂದು ತಿಳಿಸಿದ್ದಾರೆ.

ಕೈಗಾರಿಕಾ ಅಭಿವೃದ್ಧಿಯಲ್ಲಿ ಕರ್ನಾಟಕದ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಹಾಗೂ ಇನ್ನೂ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು. ಬೆಂಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅಭಿವೃದ್ಧಿಪಡಿಸಲು ಯೋಜಿಸಲಾಗಿದ್ದು, ಈ ಯೋಜನೆಯಿಂದ ಅಂದಾಜು 40,000 ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ ಎಂದರು.

ರಾಜ್ಯಕ್ಕೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ಫೆಬ್ರವರಿ 2025ರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು (Global Investor’s Meet) ಆಯೋಜಿಸಲಾಗುವುದು. ಗ್ರಾಮೀಣ ಜನರಲ್ಲಿ ಆರ್ಥಿಕ ಶಿಸ್ತು ಮತ್ತು ಉಳಿತಾಯ ಮನೋಭಾವವನ್ನು ಉತ್ತೇಜಿಸಲು ಎಂ.ಎಸ್.ಐ.ಎಲ್. ವತಿಯಿಂದ ಚಿಟ್‌ಫಂಡ್‌ ಅನ್ನು ಗ್ರಾಮಾಂತರ ಪ್ರದೇಶಗಳಿಗೆ ವಿಸ್ತರಿಸಲಾಗುವುದು. ಯಶವಂತಪುರದಲ್ಲಿ ಕೆ.ಎಸ್‌.ಡಿ.ಎಲ್ ವತಿಯಿಂದ ಜಮೀನಿನಲ್ಲಿ ವಿವಿಧ ಸರ್ಕಾರಿ ಇಲಾಖೆಗಳನ್ನು ನಿರ್ವಹಿಸಲು ಸುಸಜ್ಜಿತ ಕಛೇರಿ ಸಂಕೀರ್ಣವನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ವಿವಿಧ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಕೈಗಾರಿಕಾ ವಸಾಹತುಗಳನ್ನು ಕೇಂದ್ರ ಸರ್ಕಾರದ ಸಹಯೋಗದಲ್ಲಿ 39 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ನಿಗಮದ (KSSIDC) ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ ಬೆಂಗಳೂರು-ಮುಂಬಯಿ ಎಕನಾಮಿಕ್‌ ಕಾರಿಡಾರ್‌ ಯೋಜನೆಯಡಿ ಧಾರವಾಡ ಸಮೀಪ ಸುಮಾರು 6,000 ಎಕರೆ ಜಮೀನಿನಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಒತ್ತು ನೀಡುವ ಸಂಬಂಧ ಕೈಗಾರಿಕಾ ನೋಡ್ ಅನ್ನು ಅಭಿವೃದ್ಧಿಪಡಿಸುವ ಮೂಲಕ ಉತ್ತರ ಕರ್ನಾಟಕದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ಆರ್ಥಿಕ ಬೆಳವಣಿಗೆಗಳಿಗೆ ಉತ್ತೇಜನ ನೀಡಲು ತೀರ್ಮಾನಿಸಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಕೊಪ್ಪಳ ಜಿಲ್ಲೆಯ ಜನರಿಗೆ ಸಿಹಿ-ಕಹಿ ಬಜೆಟ್: ಅಂಜನಾದ್ರಿಗೆ 100 ಕೋಟಿ, ಆರ್ಥಿಕ ಸಲಹೆಗಾರನ ಕ್ಷೇತ್ರಕ್ಕೆ ಭರ್ಜರಿ ಅನುದಾನ

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸ್ಟಾಕ್ ಎಕ್ಸ್ಚೇಂಜ್ಗಳಲ್ಲಿ ಐಪಿಓ ಬಿಡುಗಡೆ ಮಾಡಲು ತಗಲುವ ವೆಚ್ಚದಲ್ಲಿ ಗರಿಷ್ಠ ಮಿತಿ 25 ಲಕ್ಷ ರೂ. ಗಳಿಗೆ ಒಳಪಟ್ಟು ಶೇ.50 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿಶೇಷ ಘಟಕ ಯೋಜನೆಯಡಿ ಕರ್ನಾಟಕ ಚರ್ಮ ಮತ್ತು ಫ್ಯಾಷನ್ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಎಲ್‌ಟಿ) ಡಿಪ್ಲೊಮಾ ಇನ್ ಲೆದರ್ ಅಂಡ್ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಮಾಡಲು ಪ್ರೋತ್ಸಾಹಧನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಜವಳಿ ಹಾಗೂ ನೇಕಾರಿಕೆ ಅಭಿವೃದ್ಧಿ, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಜಿಸಲು 2024-29ರ ಅವಧಿಗೆ 10,000 ಕೋಟಿ ರೂ.ಗಳ ಬಂಡವಾಳ ಹೂಡಿಕೆ ಹಾಗೂ 2 ಲಕ್ಷ ಉದ್ಯೋಗಗಳ ಸೃಜನೆಯ ಗುರಿಯೊಂದಿಗೆ ಹೊಸ ಜವಳಿ ನೀತಿಯನ್ನು ಜಾರಿಗೊಳಿಸಲಾಗುವುದು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ (ರಾಯಚೂರು) ಮತ್ತು ಮೈಸೂರು ವಿಭಾಗಗಳಲ್ಲಿ ನೂತನ ಜವಳಿ ಪಾರ್ಕ್ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು. ಇದರಿಂದ ಸುಮಾರು 10,000 ಉದ್ಯೋಗ ಸೃಷ್ಟಿಯಾಗಲಿದೆ. ಬಳ್ಳಾರಿಯಲ್ಲಿ ಅಸಂಘಟಿತವಾಗಿರುವ ಜೀನ್ಸ್ ಉದ್ದಿಮೆಗಳನ್ನು ಸಂಘಟಿಸಿ, ವಿಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಜೀನ್ಸ್ ಅಪಾರೆಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗುವುದು.

ಜವಳಿ ಪಾರ್ಕ್ಗಳು ಇಲ್ಲದಿರುವ ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್ಗಳನ್ನು ಸ್ಥಾಪಿಸುವ ಉದ್ದಿಮೆದಾರರಿಗೆ ಮೂಲಸೌಕರ್ಯಕ್ಕಾಗಿ ಜವಳಿ ನೀತಿಯನ್ವಯ ಸಹಾಯಧನವನ್ನು ನೀಡಲಾಗುವುದು. ಮಹಾತ್ಮಾ ಗಾಂಧೀಜಿಯವರು ಭೇಟಿ ನೀಡಿದ್ದ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಿಕೆ ಪ್ರೋತ್ಸಾಹಕ್ಕಾಗಿ ಕ್ರಮವಹಿಸಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಜೆಟ್​ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ