
ಬೆಂಗಳೂರು, ಸೆಪ್ಟೆಂಬರ್ 21: ಆಡಳಿತ ಮತ್ತು ವಿಪಕ್ಷಗಳ ನಡುವೆ ಮತ್ತೊಂದು ಸುತ್ತಿನ ಕದನಕ್ಕೆ ವೇದಿಕೆ ಸಜ್ಜಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಪ್ರಮುಖ ಕಾರ್ಯಸೂಚಿಗಳಾಗಿವೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮುಗಿಬೀಳಲು ತಂತ್ರ ರೂಪಿಸಿದ್ದು, ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಕೂಡ ಅಸ್ತ್ರಗಳನ್ನು ಸಿದ್ಧಪಡಿಸಿಕೊಂಡಿದೆ.
ಕಳೆದ ತಿಂಗಳು 11 ದಿನಗಳ ಮುಂಗಾರು ಅಧಿವೇಶನ ಗದ್ದಲದಲ್ಲೇ ಮುಗಿದಿತ್ತು. ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದು ಪ್ರತಿದಿನ ಧರಣಿ, ಪ್ರತಿಭಟನೆ ನಡೆಸಿದ್ದರಿಂದ ಕಲಾಪಕ್ಕೆ ಅಡ್ಡಿಯಾಗಿತ್ತು. ಬರ ಸೇರಿದಂತೆ ಯಾವುದೇ ಸಮಸ್ಯೆಗಳ ಬಗ್ಗೆ ಚರ್ಚೆಯಾಗದೆ ಮೂರು ದಿನ ಮೊದಲೇ ಅಧಿವೇಶನವನ್ನು ಮೊಟಕುಗೊಳಿಸಲಾಗಿತ್ತು.
ಆದರೆ, ಇದೀಗ ಬರ ಪರಿಸ್ಥಿತಿ ಮತ್ತು ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆಯಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಜನರ ಮೇಲಾಗುವ ಪರಿಣಾಮಗಳ ಬಗ್ಗೆ ಗಂಭೀರ ಚರ್ಚೆ ನಡೆಸಲು ಸರ್ಕಾರ ಮೂರು ದಿನಗಳ ವಿಶೇಷ ಅಧಿವೇಶನ ನಡೆಸುತ್ತಿದೆ. ಬೆಳಗ್ಗೆ 11 ಗಂಟೆಗೆ ಸದನ ಆರಂಭವಾಗಲಿದ್ದು, ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ.
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ, ಬೆಳೆಹಾನಿ, ಕುಡಿಯುವ ನೀರು ಮತ್ತು ವಿದ್ಯುತ್ ಅಭಾವದ ಕುರಿತು ಚರ್ಚೆ ನಡೆಯಲಿದೆ. ಜಾನುವಾರುಗಳಿಗೆ ನೀರು ಮತ್ತು ಮೇವಿನ ಕೊರತೆ, ಬೆಳೆ ನಷ್ಟ ಪರಿಹಾರದ ಬಗ್ಗೆಯೂ ಗಂಭೀರ ಚರ್ಚೆ ನಡೆಯುವ ಸಾಧ್ಯತೆಯಿದೆ. ರೈತರ ಸಾಲಮನ್ನಾಗೆ ಪ್ರತಿಪಕ್ಷಗಳು ಪಟ್ಟು ಹಿಡಿಯುವ ಸಾಧ್ಯತೆಯೂ ಇದೆ.
ಇದರ ಜತೆಗೆ ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆ ವಿಚಾರವೂ ಪ್ರಮುಖವಾಗಿ ಚರ್ಚೆಗೆ ಬರಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಜನರಲ್ಲಿ ಇರುವ ಆತಂಕ ಮತ್ತು ಕಸ್ತೂರಿರಂಗನ್ ವರದಿ ಜಾರಿಯಿಂದ ಉಂಟಾಗಬಹುದಾದ ತೊಂದರೆಗಳ ಬಗ್ಗೆ ಚರ್ಚೆ ನಡೆಯಲಿದೆ. ಕಸ್ತೂರಿರಂಗನ್ ವರದಿ ಅಧಿಸೂಚನೆ ವಿರುದ್ಧ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಅಭಿಪ್ರಾಯ ಸಲ್ಲಿಸುವ ಸಾಧ್ಯತೆಯೂ ಇದೆ.
ಉಡುಪಿ, ಚಿಕ್ಕಮಗಳೂರು ಬಳಿಕ ಹಾಸನದ ಸಕಲೇಶಪುರದಲ್ಲಿ ಕಸ್ತೂರಿರಂಗನ್ ವರದಿ ಜಾರಿಯಿಂದ ಬಾಧಿತರಾಗುವ ಗ್ರಾಮಸ್ಥರೊಂದಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ಸಂವಾದ ನಡೆಸಿದ್ದಾರೆ. ಶೀಘ್ರದಲ್ಲೇ ಸಮಸ್ಯೆ ಪರಿಹರಿಸುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ, ‘ನಾವು ಬಿಜೆಪಿ ರೀತಿ ಭಾವನೆ ಮೇಲೆ ರಾಜಕೀಯ ಮಾಡಲ್ಲ’ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ‘ಭಾವನೆ ಇಲ್ಲದೇ ಜೀವನವೇ ಇಲ್ಲ’ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ವಿಶೇಷ ಅಧಿವೇಶನ: ಸಹಕಾರ ನೀಡುವಂತೆ ವಿಪಕ್ಷ ನಾಯಕರಿಗೆ ಸಚಿವ ಚಲುವರಾಯಸ್ವಾಮಿ ಪತ್ರ
ವಿಶೇಷ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮುಗಿಬೀಳುವ ಸಾಧ್ಯತೆಯಿದೆ. ಇದಕ್ಕೆ ತಿರುಗೇಟು ನೀಡಲು ಸರ್ಕಾರ ಕೂಡ ಪ್ರತ್ಯಸ್ತ್ರಗಳನ್ನು ಸಿದ್ಧಪಡಿಸಿಕೊಂಡಿದೆ. ಹೀಗಾಗಿ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಮತ್ತೊಂದು ಸುತ್ತಿನ ಕದನ ನಡೆಯುವ ಸಾಧ್ಯತೆಯಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ