ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರವಾಗಿ ಸುಪ್ರೀಂಕೋರ್ಟ್​ಗೆ ಅಫಿಡವಿಟ್ ಸಲ್ಲಿಕೆ: ಬಸವರಾಜ ಬೊಮ್ಮಾಯಿ

ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸುಪ್ರೀಂಕೋರ್ಟ್​ಗೆ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ. ಸುಪ್ರೀಂಕೋರ್ಟ್​ನಿಂದ ಒಳ್ಳೆಯ ತೀರ್ಮಾನದ ನಿರೀಕ್ಷೆಯಲ್ಲಿ‌ ಇದ್ದೇವೆ ಎಂದು ಅವರು ತಿಳಿಸಿದರು.

ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರವಾಗಿ ಸುಪ್ರೀಂಕೋರ್ಟ್​ಗೆ ಅಫಿಡವಿಟ್ ಸಲ್ಲಿಕೆ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
guruganesh bhat
| Updated By: ganapathi bhat

Updated on:Apr 04, 2021 | 7:58 PM

ದಾವಣಗೆರೆ: ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆ. ಇದಕ್ಕೆ ಪರಿಹಾರ ಸಿಗಬೇಕೆಂದರೆ ಮೀಸಲಾತಿ ಪ್ರಮಾಣ ಶೇ 50ಕ್ಕಿಂತ ಹೆಚ್ಚಾಗಬೇಕು. ಮೀಸಲಾತಿಯ ನೀಡುವ ಪ್ರಮಾಣದಲ್ಲಿ ಹೆಚ್ಚಿಸಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ‘ಸುಪ್ರೀಂ’ನಿಂದ ಒಳ್ಳೆಯ ಆದೇಶ ಬರುವ ನಿರೀಕ್ಷೆ ಇದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಪ್ರಕಟಿಸಿದರು.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠ ಬೆಳ್ಳೊಡಿಯಲ್ಲಿ ನಿರ್ಮಿಸಲಾಗಿರುವ ನೂತನ ವಿದ್ಯಾರ್ಥಿನಿಲಯ, ಸಮುದಾಯ ಭವನ ಮತ್ತು ಮುಖ್ಯ ಮಹಾದ್ವಾರ ಉದ್ಘಾಟನೆ ಹಾಗೂ ಶಾಖಾಮಠದ 5 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಾಲುಮತ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕಾದರೆ ಮೀಸಲಾತಿ ಪ್ರಮಾಣವನ್ನು ಶೇಕಡಾ 7.5 ಕ್ಕೆ ಹೆಚ್ಚಿಸಬೇಕು. ಅದೇ ರೀತಿ ಬೇರೆ ಸಮಾಜದವರು ಮೀಸಲಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಎಲ್ಲ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬೇಕಾದರೆ ಈಗಿರುವ ಶೇ 50 ದಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸಲು ಬದ್ಧವಾಗಿದೆ ಎಂದು ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸುಪ್ರೀಂಕೋರ್ಟ್​ಗೆ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ. ಸುಪ್ರೀಂಕೋರ್ಟ್​ನಿಂದ ಒಳ್ಳೆಯ ತೀರ್ಮಾನದ ನಿರೀಕ್ಷೆಯಲ್ಲಿ‌ ಇದ್ದೇವೆ ಎಂದು ಅವರು ತಿಳಿಸಿದರು.

ನ್ಯಾಯಾಧೀಶರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ ಮೀಸಲಾತಿ ಹೆಚ್ಚಿಸುವುದು ನಿಜಕ್ಕೂ ಸವಾಲು. ಮೀಸಲಾತಿ ಎಲ್ಲ ಸಮುದಾಯಗಳಿಗೆ ಕಾನೂನಾತ್ಮಕವಾಗಿ, ಸಂವಿಧಾನದ ಚೌಕಟ್ಟಿನಲ್ಲಿ, ಸೈದ್ಧಾಂತಿಕವಾಗಿ ನಿಗದಿ ಆಗಬೇಕು. ಮುಂದಿನ ದಿನಗಳಲ್ಲಿ ಯಾರೂ ಕೂಡ ಈ ನಿರ್ಧಾರವನ್ನು ಪ್ರಶ್ನೆ ಮಾಡಬಾರದೆಂಬ ಸದುದ್ದೇಶದಿಂದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ. ಕುರುಬ ಸಮುದಾಯವನ್ನು ಎಸ್​ಟಿಗೆ ಸೇರಿಸಬೇಕೆಂಬ ಬೇಡಿಕೆ ಇದೆ. ಈ ಸಂಬಂಧ ಕುಲಶಾಸ್ತ್ರ ಅಧ್ಯಯನ ನಡೆಯುತ್ತದೆ. ಪಂಚಮಸಾಲಿ ‌ಸಮಾಜದವರು 2ಎ ಬೇಡಿಕೆ ಇಟ್ಟಿದ್ದಾರೆ. ಅದೇ ರೀತಿ ಹಲವು ಸಣ್ಣ ಸಮುದಾಯದ ಜನರು ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ. ಇವರ ಬೇಡಿಕೆ ಈಡೇರಿಸಲು ಸರ್ಕಾರ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂಬ ನಿರ್ಧಾರ ಮಾಡಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕನಕ‌ಗುರು ಪೀಠಕ್ಕೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲ ರೀತಿಯ ನೆರವು ನೀಡಿದೆ. ಮೈಲಾರ ಮಠದ ಅಭಿವೃದ್ಧಿ ಗಾಗಿ 10 ಕೋಟಿ ಮಂಜೂರು ಮಾಡಲಾಗಿದೆ. ಆ ಪೈಕಿ 2.5 ಕೋಟಿ ಹಣವನ್ನು ಯಡಿಯೂರಪ್ಪ ಅವರು ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ಅವರ ಪ್ರೀತಿ ಸಮಾಜದ ಮೇಲಿದೆ. ಈ ಸಮಾಜದವರ ಪ್ರೀತಿ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ಹಾಗೂ ಇತರೆ ನಾಯಕರ ಮೇಲಿದೆ ಎಂದು ಸಚಿವ ಬೊಮ್ಮಾಯಿ ಹೇಳಿದರು.

ಸಿಎಂ ಸರ್ವಧರ್ಮಗಳಿಗೆ ಸಕಲ ನೆರವು ನೀಡಿದ್ದಾರೆ ಕನಕದಾಸರು ಅಪರೂಪಕ್ಕೆ, ಯುಗಕ್ಕೆ ಒಮ್ಮೆ ಹುಟ್ಟುತ್ತಾರೆ. ಅಂಥ ದಾರ್ಶನಿಕರು ಹುಟ್ಟಿದ ಊರು ಬಾಡ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವುದು ನನಗೆ ಹೆಮ್ಮೆಯ ವಿಷಯ ಎಂದು ಬಸವರಾಜ ಬೊಮ್ಮಾಯಿ ವಿವರಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತ ವನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರಿಗೆ ಯಾವುದೇ ಜಾತಿ ಧರ್ಮ ಇಲ್ಲ. ಕನಕದಾಸರ ರೀತಿ ಎಲ್ಲಾ ಧರ್ಮಗಳಿಗೆ ಒಳಿತು ಮಾಡಬೇಕೆಂಬ ಮನೋಧರ್ಮ ಯಡಿಯೂರಪ್ಪ ಅವರದು. ಹೀಗಾಗಿ ಸರ್ವಧರ್ಮಗಳಿಗೆ ಅವರು ಸಕಲ ನೆರವು ನೀಡಿದ್ದಾರೆ ಎಂದು ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಕುರುಬ ಸಮಾಜಕ್ಕೆ ಎಸ್​ಟಿ ಮೀಸಲಾತಿ ನೀಡಲು ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದೆ. ಜೊತೆಗೆ ಮೀಸಲಾತಿ ಹೆಚ್ಚಿಸಲು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಯಾವುದೇ ಭೇದಭಾವವಿಲ್ಲದೆ ಸಮಾಜದ ಸಂಕಷ್ಟಕ್ಕೆ ಸ್ಪಂದಿಸುವೆ. ಮೀಸಲಾತಿ ನೀಡುವ ಬಗ್ಗೆ ನಿವೃತ್ತ ನ್ಯಾಯಮೂರ್ತಿಗಳ‌ ಸಮಿತಿ ನೇಮಕ ಮಾಡಲಾಗಿದೆ. ಅದರ ವರದಿ ಬರಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ: ಶೇ 50ಕ್ಕಿಂತ ಹೆಚ್ಚು ಮೀಸಲಾತಿ ನೀಡಲು ಅವಕಾಶ ಕೊಡಿ.. ಯಡಿಯೂರಪ್ಪ ಸರ್ಕಾರ ಸಲ್ಲಿಸಿತು ಸುಪ್ರೀಂಗೆ ಮನವಿ

ಒಂದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಒಟ್ಟಿಗೆ ವೇದಿಕೆ ಏರಿದರೂ ಮಾತನಾಡಿಕೊಳ್ಳದ ಸಿಎಂ ಯಡಿಯೂರಪ್ಪ ಮತ್ತು ಸಚಿವ ಈಶ್ವರಪ್ಪ

(Karnataka State govt committed to increase the reservation percentage says HM Basavaraj Bommai in Davanagere)

Published On - 4:48 pm, Sun, 4 April 21