Text Book Row: ಮತ್ತೆ ಪರಿಷ್ಕರಣೆ ಆಗಲಿದೆಯೇ ಪಠ್ಯ ಪುಸ್ತಕ; ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

|

Updated on: May 23, 2023 | 8:27 PM

ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಿದ್ಧಪಡಿಸಲಾಗಿರುವ ಪಠ್ಯ ಪುಸ್ತಕದ ಪರಿಷ್ಕರಣೆ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದರು.

Text Book Row: ಮತ್ತೆ ಪರಿಷ್ಕರಣೆ ಆಗಲಿದೆಯೇ ಪಠ್ಯ ಪುಸ್ತಕ; ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು
ಸಿದ್ದರಾಮಯ್ಯ
Follow us on

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಿದ್ಧಪಡಿಸಲಾಗಿರುವ ಪಠ್ಯ ಪುಸ್ತಕದ (Text Book) ಪರಿಷ್ಕರಣೆ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಗಳವಾರ ತಿಳಿಸಿದರು. ವಿಧಾನಸೌಧದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪಠ್ಯ ಪುಸ್ತಕ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ಬಿಜೆಪಿ ಆಡಳಿತದ ಅವಧಿಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಆಡಳಿತದಲ್ಲಿ ಸುಧಾರಣೆ, ಪಾರದರ್ಶಕ ಆಡಳಿತ ನೀಡಲು ಅಧಿಕಾರಿಗಳ ಸಹಕಾರ ಕೋರಿದ್ದೇವೆ. ಉತ್ತಮ ಆಡಳಿತ ನೀಡಲು ತ್ವರಿತವಾಗಿ ಕಡತ ವಿಲೇವಾರಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿಗದಿತ ಸಮಯ ಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಜನರಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಲು ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಯೋಜನೆಗಳನ್ನು ನಿಗದಿತ ಕಾಲಾವಧಿಯೊಳಗೆ ಅನುಷ್ಠಾನಗೊಳಿಸಬೇಕು. ತಡವಾದರೆ ಭ್ರಷ್ಟಾಚಾರಕ್ಕೆ ಆಸ್ಪದವಾಗುತ್ತದೆ. ಜೊತೆಗೆ ಯೋಜನೆಯ ಅನುದಾನ ವೆಚ್ಚ ಹೆಚ್ಚಳವಾಗುತ್ತದೆ. ಹಾಗಾಗಿ ಸೂಕ್ತ ಸಮಯಕ್ಕೆ ಯೋಜನೆಯನ್ನು ಜನರಿಗೆ ತಲುಪಿಸಿ ಆಡಳತದಲ್ಲಿ ಪಾರದರ್ಶಕತೆ ತಂದು ಉತ್ತಮ ಆಡಳಿತ ನೀಡಲು ಕ್ರಮವಹಿಸಿ ಎಂದು ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಪಠ್ಯಪುಸ್ತಕ ರಚನಾ ಸಮಿತಿ ಮಾಡಲಾಗಿತ್ತು. ಆ ಸಮಿತಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. ಬರಗೂರು ರಾಮಚಂದ್ರಪ್ಪ ಸಮಿತಿಯು ಪಠ್ಯ ಪರಿಷ್ಕರಣೆ ವೇಳೆ ಕೆಲವೊಂದು ಲೋಪ ದೋಷಗಳನ್ನು ಮಾಡಿದೆ ಎಂದು ನಂತರ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರ ಆಕ್ಷೇಪಿಸಿತ್ತು. ಅಲ್ಲದೆ, ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ರಚಿಸಿತ್ತು. ಚಕ್ರತೀರ್ಥ ನೇತೃತ್ವದ ಸಮಿತಿ 6 ರಿಂದ 10ನೇ ತರಗತಿವರೆಗಿನ ಸಮಾಜ ವಿಜ್ಞಾನ ಪಠ್ಯ ಪುಸ್ತಕ, 6 ರಿಂದ 10ನೇ ತರಗತಿವರೆಗಿನ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. 3ನೇ ತರಗತಿಯ ಪರಿಸರ ಅಧ್ಯಯನ ಪಠ್ಯ ಪುಸ್ತಕಗಳ ಪರಿಷ್ಕರಣೆಯನ್ನೂ ಮಾಡಿತ್ತು.

ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆಗೆ ಚಿಂತಕರು, ಬುದ್ಧಿಜೀವಿಗಳು ಹಾಗೂ ಪ್ರತಿಪಕ್ಷಗಳಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ದೊಡ್ಡ ಮಟ್ಟದ ವಿವಾದವೇ ಸೃಷ್ಟಿಯಾಗಿತ್ತು. ಆದಾಗ್ಯೂ ತನ್ನ ನಿಲುವಿಗೆ ಅಂಟಿಕೊಂಡ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡಿತ್ತು. ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಪಠ್ಯ ಪುಸ್ತಕ ಮರು ಪರಿಷ್ಕರಣೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ