ಮನೆ ಮನೆಯಲ್ಲೂ ಮಾನಸಿಕ ಆರೋಗ್ಯ ತಪಾಸಣೆ: ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಯೋಜನೆ
ಕರ್ನಾಟಕ ಆರೋಗ್ಯ ಇಲಾಖೆ 2025 ರ ಜನವರಿಯಿಂದ ರಾಜ್ಯದ ಪ್ರತಿ ಮನೆಗೂ ಭೇಟಿ ನೀಡಿ ಮಾನಸಿಕ ಮತ್ತು ದೈಹಿಕ ಆರೋಗ್ಯ ತಪಾಸಣೆ ನಡೆಸುವ ಯೋಜನೆ ಹಮ್ಮಿಕೊಂಡಿದೆ. ಗೃಹ ಆರೋಗ್ಯ ಯೋಜನೆಯ ಭಾಗವಾಗಿ, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಉಚಿತ ಚಿಕಿತ್ಸೆ ಮತ್ತು ಔಷಧಿಗಳನ್ನು ಒದಗಿಸಲಾಗುವುದು. ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
ಬೆಂಗಳೂರು, ನವೆಂಬರ್ 30: ಮನೆ ಮನೆಗೆ ತೆರಳಿ ಚಿಕಿತ್ಸೆ ಜೊತೆ ಉಚಿತ ಔಷಧಿ ನೀಡುವ ‘ಗೃಹ ಆರೋಗ್ಯ’ ಯೋಜನೆ ಆರಂಭಿಸಿರುವ ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಮತ್ತೊಂದು ಮಹತ್ವದ ಯೋಜನೆ ಹಮ್ಮಿಕೊಂಡಿದೆ. 2025ರ ಜನವರಿಯಿಂದ ರಾಜ್ಯದ ಪ್ರತಿ ಮನೆಯ ಸದಸ್ಯರ ಮಾನಸಿಕ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಗೃಹ ಆರೋಗ್ಯ ಯೋಜನೆ ಅಂಗವಾಗಿ ಜನವರಿಯಿಂದ ಆರೋಗ್ಯ ಇಲಾಖೆ ಸಿಬ್ಬಂದಿ ರಾಜ್ಯದ ಪ್ರತಿ ಮನೆಗೂ ತೆರಳಿ ಮಾನಸಿಕ ಆರೋಗ್ಯ ಸಮಸ್ಯೆಗಳು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಡಿಮೆನ್ಶಿಯಾ ಇಂಡಿಯಾ ಅಲಯನ್ಸ್ (DIA) ನಡೆಸಿದ DemCon’24, ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರು ರಾಜ್ಯದಾದ್ಯಂತ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಅಧಿಕ ರಕ್ತದೊತ್ತಡ ಅಥವಾ ಮಧುಮೇಹದಿಂದ ಬಳಲುತ್ತಿರುವ ಜನರು ನಿರಂತರ ಔಷಧಿಗಳನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ತಪಾಸಣೆ ನಡೆಸಲಿದ್ದಾರೆ. ಅನೇಕ ರೋಗಿಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಅಲ್ಪಾವಧಿಯ ನಂತರ ವೈದ್ಯರು ಸೂಚಿಸಿದ ಚಿಕಿತ್ಸೆ, ಔಷಧ ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರೆ. ಇದಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಗ್ರಾಮೀಣ ಪ್ರದೇಶಗಳ ಬಗ್ಗೆ ಹೆಚ್ಚು ಕಾಳಜಿ
ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ತಪಾಸಣೆಯ ಜೊತೆಗೆ, ಗೃಹ ಆರೋಗ್ಯ ಯೋಜನೆಯಡಿ ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಲಾಗುವುದು. ಖಿನ್ನತೆಯಂತಹ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಕಡೆಗಣಿಸಲಾಗುತ್ತದೆ. ಅಲ್ಲಿ ಮೆಮೊರಿ ನಷ್ಟದಂತಹ ಪರಿಸ್ಥಿತಿಗಳನ್ನು ಸಾಮಾನ್ಯವಾಗಿ ತಪ್ಪಾಗಿ ಅರ್ಥೈಸಲಾಗುತ್ತದೆ. ಇದರ ನಿವಾರಣೆಗೆ ಮಾನಸಿಕ ಆರೋಗ್ಯ ತಪಾಸಣೆ, ಚಿಕಿತ್ಸೆ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಆರೋಗ್ಯ ಕಾರ್ಯಕರ್ತರಿಗೆ ತರಬೇತಿ
ಯೋಜನೆಯ ಭಾಗವಾಗಿ, ಮಾನಸಿಕ ಆರೋಗ್ಯ ಸಮಸ್ಯೆಗಳ ಆರಂಭಿಕ ಚಿಹ್ನೆಗಳನ್ನು ಗುರುತಿಸಲು ಮತ್ತು ಅಗತ್ಯ ಬೆಂಬಲವನ್ನು ಒದಗಿಸಲು ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರಿಂದ ವ್ಯಕ್ತಿಗಳು ಅವರಿಗೆ ಅಗತ್ಯವಿರುವ ಆರೈಕೆಯನ್ನು ಪಡೆಯಲಿದ್ದಾರೆ ಎಂದು ಗುಂಡೂರಾವ್ ತಿಳಿಸಿದ್ದಾರೆ.
ಇದನ್ನೂ ಓದಿ: ಏನಿದು ಗೃಹ ಆರೋಗ್ಯ ಯೋಜನೆ? ಜನ ಸಾಮಾನ್ಯರಿಗೆ ಏನು ಉಪಯೋಗ? ಇಲ್ಲಿದೆ ವಿವರ
ಆರೋಗ್ಯ ಯೋಜನೆಯನ್ನು ಮೊದಲಿಗೆ ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತು. ಇದೀಗ ರಾಜ್ಯದಾದ್ಯಂತ ಸುಮಾರು 30,000 ರೋಗಿಗಳನ್ನು ತಪಾಸಣೆ ನಡೆಸಲಾಗಿದೆ. ಗ್ರಾಮೀಣ ಪ್ರದೇಶಗಳಿಗೆ ನಿಯಮಿತವಾಗಿ ಭೇಟಿ ನೀಡುವ ಸ್ಥಳೀಯ ಆರೋಗ್ಯ ಕಾರ್ಯಕರ್ತರಿಗೆ ಜಾಗೃತಿ ಮತ್ತು ತರಬೇತಿ ನೀಡಲಾಗುತ್ತಿದೆ. ಅವರು ಆರಂಭಿಕ ಹಂತದಲ್ಲಿ ಆರೋಗ್ಯ ಸಮಸ್ಯೆಗಳನ್ನು ಗುರುತಿಸುತ್ತಾರೆ ಮತ್ತು ಪರಿಹರಿಸುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ