
ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಮುಂಗಾರು (Monsoon) ಚುರುಕುಗೊಳ್ಳುವ ಲಕ್ಷಣಗಳು ಇನ್ನೂ ಕಾಣಿಸುತ್ತಿಲ್ಲ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ಪ್ರಕಟಿಸಿದೆ. ಆದಾಗಗ್ಯೂ, ಜುಲೈ 16 ಮತ್ತು 17ರಂದು ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜುಲೈ 16 ಮತ್ತು 17ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ (ಜುಲೈ 16ರಂದು) ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಜುಲೈ 17ರಂದು ಬೀದರ್‌ನಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದರೂ, ಬಿರುಗಾಳಿ ಮುಂದುವರಿಯುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಎರಡೂ ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಇನ್ನೂ ಕೆಲವು ದಿನಗಳ ಕಾಲ ಮಳೆಯ ಸಾಧ್ಯತೆ ಕಡಿಮೆ ಎಂದು ಎರಡು ದಿನಗಳ ಹಿಂದಷ್ಟೇ ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ಆತುರಪಡದೆ ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಕೃಷಿ ತಜ್ಞರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ರೈತರೇ ಗಮನಸಿ: ಬಿತ್ತನೆ ಸಂಬಂಧ ಹವಾಮಾನ ತಜ್ಞರು ನೀಡಿರುವ ಸಲಹೆ ಇಲ್ಲಿದೆ
ಮಳೆ ಕೊರತೆ ಮುಂದುವರಿದರೆ ಜಲಾಶಯಗಳ ಒಳಹರಿವು, ಬೆಳೆಗಳ ಬೆಳವಣಿಗೆ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಕೆಲವು ದಿನಗಳ ಹವಾಮಾನ ಬೆಳವಣಿಗೆ ರಾಜ್ಯದ ಕೃಷಿ ಕ್ಷೇತ್ರಕ್ಕೆ ನಿರ್ಣಾಯಕವಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ