
ಬೆಂಗಳೂರು, ಆಗಸ್ಟ್ 1: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರವು ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಿದೆ. ಈ ನಡುವೆ ಕೊಡಗು ಮತ್ತು ಚಿಕ್ಕಮಗಳೂರಿನ ಕೆಲವು ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಹಲವು ದಿನಗಳಿಂದ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಇಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆಯಾ ತಾಲೂಕುಗಳ ತಹಶೀಲ್ದಾರ್‌ಗಳು ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದೆ. ಕೊಪ್ಪ ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮಳೆ ಸಂಬಂಧಿತ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತೆ ಭಾರೀ ಮಳೆ ಸಾದ್ಯತೆ ಇರುವ ಕಾರಣ ಪಿಯುಸಿವರೆಗೆ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನಲ್ಲಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 50-60 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ, ಕೊಡಗು ಮತ್ತು ಹಾಸನದಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು.
ಆಗಸ್ಟ್ 2ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗದಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉಳಿದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.
ಶುಕ್ರವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಸಕ್ರಿಯವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಕರಾವಳಿ ಕರ್ನಾಟಕದಲ್ಲಿ ತುಸು ಉತ್ತಮ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:31 am, Sat, 1 August 26