
ಬೆಂಗಳೂರು, ನವೆಂಬರ್ 22: ಕರ್ನಾಟಕದಲ್ಲಿ ಚಳಿಯ ಅಬ್ಬರ ಮುಂದುವರಿದಿದ್ದು, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ರಾಜ್ಯದ ಬಯಲು ಪ್ರದೇಶಗಳಲ್ಲೇ ದಾವಣಗೆರೆ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ ದಾಖಲಿಸಿದೆ. ಬೆಳಗಿನ ಜಾವ ಚಳಿಯ ತೀವ್ರತೆ ಹೆಚ್ಚಾಗಿದ್ದು, ಜನರು ಬೆಚ್ಚನೆಯ ಉಡುಪುಗಳ ಮೊರೆ ಹೋಗುವಂತಾಗಿದೆ. ಜತೆಗೆ, ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಆ ಬಳಿಕ ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ.
ನವೆಂಬರ್ 23ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ತುಮಕೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 24ರಿಂದ 27ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಿಂಚಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ