
ಬೆಂಗಳೂರು, ಸೆಪ್ಟೆಂಬರ್ 21: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ 21 ಮತ್ತು 22ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರ ಹವಾಮಾನ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದು (ಸೆಪ್ಟೆಂಬರ್ 21ರಂದು) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಉತ್ತರ ಒಳನಾಡಿನಲ್ಲಿ ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಸೆಪ್ಟೆಂಬರ್ 22ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ಕೆಐಎಎಲ್ ವೀಕ್ಷಣಾಲಯದಲ್ಲಿ 9 ಮಿ.ಮೀ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ ವೀಕ್ಷಣಾಲಯದಲ್ಲಿ 7 ಮಿ.ಮೀ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 7 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ರಾಜ್ಯದ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದರೆ, ಕರಾವಳಿ ಕರ್ನಾಟಕದಲ್ಲಿ ತುಸು ದುರ್ಬಲವಾಗಿತ್ತು ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ