Karnataka Weather Forecast: ಕರಾವಳಿ ಜಿಲ್ಲೆಗಳು, ಕೊಡಗು, ಮಲೆನಾಡಿನ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 26: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಆಗಸ್ಟ್ 26 ಮತ್ತು 27ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗಿನ ಭಾಗಮಂಡಲದಲ್ಲಿ 15 ಸೆಂ.ಮೀ ಮಳೆಯಾಗಿದ್ದು, ಸುಳ್ಯ, ಸುಬ್ರಹ್ಮಣ್ಯ ಹಾಗೂ ನಾಪೋಕ್ಲುವಿನಲ್ಲಿ ತಲಾ 8 ಸೆಂ.ಮೀ ಮಳೆ ದಾಖಲಾಗಿದೆ.

ಮುಖ್ಯಾಂಶಗಳು
- ಕೊಡಗಿನ ಭಾಗಮಂಡಲದಲ್ಲಿ 15 ಸೆಂ.ಮೀ ಮಳೆ ದಾಖಲು
- ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆಯ ಅಬ್ಬರ
- ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಆಗಸ್ಟ್ 26: ಕರ್ನಾಟಕದಲ್ಲಿ ಮುಂಗಾರು (Monsoon Rain) ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನವೂ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುನ್ಸೂಚನೆಯಂತೆ (Weather Forecast), ಆಗಸ್ಟ್ 26 ಮತ್ತು 27ರಂದು ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ. ಈ ನಡುವೆ ಕೊಡಗಿನ ಭಾಗಮಂಡಲದಲ್ಲಿ ಬರೋಬ್ಬರಿ 15 ಸೆಂ.ಮೀ ಮಳೆ ದಾಖಲಾಗಿರುವುದು ಗಮನಾರ್ಹ.
ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆ
ಆಗಸ್ಟ್ 26ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿಯ ಪರಿಸ್ಥಿತಿ ಆಗಸ್ಟ್ 27ರಂದು ಕೂಡ ಮುಂದುವರಿಯಲಿದೆ. ಕರಾವಳಿ ಭಾಗದಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಮಳೆ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನಲ್ಲಿ ಸಾಧಾರಣದಿಂದ ಹಗುರ ಮಳೆ
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಆಗಸ್ಟ್ 27ರಂದು ಕೂಡ ಇದೇ ರೀತಿಯ ಮಳೆ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದ್ದರೂ, ಕೆಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆ
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಗಸ್ಟ್ 26ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ಇದೆ.
ಆಗಸ್ಟ್ 27ರಂದು ಕೂಡ ದಕ್ಷಿಣ ಒಳನಾಡಿನ ಇದೇ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಕ್ರಿಯವಾಗಿರುವುದರಿಂದ ಕೆಲವು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.
ಕೊಡಗಿನಲ್ಲಿ 15 ಸೆಂಮೀ ಮಳೆ!
ಮಂಗಳವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ರಾಜ್ಯದ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕೊಡಗಿನ ಭಾಗಮಂಡಲದಲ್ಲಿ 15 ಸೆಂ.ಮೀ ಮಳೆ ದಾಖಲಾಗಿದೆ. ಕೊಡಗಿನ ನಾಪೋಕ್ಲುವಿನಲ್ಲಿ 8 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 8 ಸೆಂ.ಮೀ, ಸುಬ್ರಹ್ಮಣ್ಯದಲ್ಲಿ 8 ಸೆಂ.ಮೀ ಮಳೆಯಾಗಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಮಳೆ ಮುನ್ಸೂಚನೆ ಇರುವ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯ ಸಾಧ್ಯತೆ ಮುಂದುವರಿಯಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




