Karnataka Weather Forecast: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ, ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 18: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಐಎಂಡಿ, ಕರಾವಳಿ ಹಾಗೂ ಘಟ್ಟ ಪ್ರದೇಶಗಳಿಗೆ ಭೂಕುಸಿತ ಎಚ್ಚರಿಕೆಯನ್ನೂ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿ ಶಾಲೆ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ.

ಮುಖ್ಯಾಂಶಗಳು
- ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಆರೆಂಜ್ ಅಲರ್ಟ್
- ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ
- ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು, ಜುಲೈ 18: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ (Monsoon Rain) ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಈ ಹಿಂದೆ ರಾಜ್ಯದಲ್ಲಿ ಇನ್ನೂ ಕೆಲವು ವ್ಯಾಪಕ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದರೂ, ಇದೀಗ ಕರಾವಳಿ ಭಾಗದಲ್ಲಿ ಮಳೆ ಚುರುಕಾಗತೊಡಗಿದೆ. ಆದರೆ, ರಾಜ್ಯದ ಬಹುತೇಕ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಸಾಧಾರಣ ಮಳೆಯೇ ಮುಂದುವರಿಯುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಭಾರೀ ಮಳೆ, ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಎಚ್ಚರಿಕೆ
ಜುಲೈ 18 ಮತ್ತು 19ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮಲೆನಾಡು, ಉತ್ತರ ಒಳನಾಡಿನಲ್ಲೂ ಮಳೆ-ಬಿರು ಗಾಳಿ
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯಲ್ಲೂ ಕೆಲವೆಡೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲೂ ಕೆಲವೆಡೆ ಬಿರುಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕರಾವಳಿಯಲ್ಲಿ ಮುಂದಿನ 24-48 ಗಂಟೆ ಎಚ್ಚರಿಕೆ ಅಗತ್ಯ
ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಮುಂದುವರಿಯುವ ನಿರೀಕ್ಷೆ ಇದ್ದು, ನದಿ-ಹಳ್ಳಗಳ ತೀರ ಪ್ರದೇಶದ ನಿವಾಸಿಗಳು, ಘಟ್ಟ ಪ್ರದೇಶಗಳಲ್ಲಿ ಸಂಚರಿಸುವವರು ಹಾಗೂ ಮೀನುಗಾರರು ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




