
ಬೆಂಗಳೂರು, ಜುಲೈ 18: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ (Monsoon Rain) ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಈ ಹಿಂದೆ ರಾಜ್ಯದಲ್ಲಿ ಇನ್ನೂ ಕೆಲವು ವ್ಯಾಪಕ ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದರೂ, ಇದೀಗ ಕರಾವಳಿ ಭಾಗದಲ್ಲಿ ಮಳೆ ಚುರುಕಾಗತೊಡಗಿದೆ. ಆದರೆ, ರಾಜ್ಯದ ಬಹುತೇಕ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಸಾಧಾರಣ ಮಳೆಯೇ ಮುಂದುವರಿಯುವ ಸಾಧ್ಯತೆ ಇದೆ.
ಜುಲೈ 18 ಮತ್ತು 19ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯಲ್ಲೂ ಕೆಲವೆಡೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲೂ ಕೆಲವೆಡೆ ಬಿರುಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಮುಂದುವರಿಯುವ ನಿರೀಕ್ಷೆ ಇದ್ದು, ನದಿ-ಹಳ್ಳಗಳ ತೀರ ಪ್ರದೇಶದ ನಿವಾಸಿಗಳು, ಘಟ್ಟ ಪ್ರದೇಶಗಳಲ್ಲಿ ಸಂಚರಿಸುವವರು ಹಾಗೂ ಮೀನುಗಾರರು ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ