
ಬೆಂಗಳೂರು, ನವೆಂಬರ್ 7: ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ 11 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದೇ ವೇಳೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಶುಕ್ರವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಕರ್ನಾಟಕದ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದೆ. ಮಂಡ್ಯ ಜಿಲ್ಲೆಯ ಬೆಳ್ಳೂರಿನಲ್ಲಿ 7 ಸೆಂ.ಮೀ. ಭಾರೀ ಮಳೆ ದಾಖಲಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ಪ್ರದೇಶದಲ್ಲಿ 4 ಸೆಂ.ಮೀ., ಕೊಣನೂರಿನಲ್ಲಿ 3 ಸೆಂ.ಮೀ. ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 3 ಸೆಂ.ಮೀ. ಮಳೆ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ