Karnataka Weather Forecast: ಮುಂದಿನ ನಾಲ್ಕು ದಿನ ಕರ್ನಾಟಕದಲ್ಲಿ ಮಳೆ ಅಬ್ಬರ: 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕ ಹವಾಮಾನ ಮುನ್ಸೂಚನೆ: ಅಕ್ಟೋಬರ್ 19ರವರೆಗೆ ಈಶಾನ್ಯ ಮಾರುತಗಳ ಪ್ರಭಾವದಿಂದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಮುಂದಿನ ಒಂದು ವಾರ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮುಖ್ಯಾಂಶಗಳು
- ಅಕ್ಟೋಬರ್ 19ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ
- ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ
- ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ
ಬೆಂಗಳೂರು, ಅಕ್ಟೋಬರ್ 15: ಕರ್ನಾಟಕದಲ್ಲಿ ಈಶಾನ್ಯ ಮಾರುತಗಳ ಪ್ರಭಾವ ಆರಂಭವಾಗುತ್ತಿದ್ದು, ಅಕ್ಟೋಬರ್ 19ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ತಜ್ಞ ಸಿಎಸ್ ಪಾಟೀಲ್ ಅವರ ಮಾಹಿತಿ ಪ್ರಕಾರ, ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಯಾವ ದಿನ ಯಾವ ಜಿಲ್ಲೆಗಳಲ್ಲಿ ಮಳೆ ಬರಲಿದೆ?
- ಅಕ್ಟೋಬರ್ 15: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
- ಅಕ್ಟೋಬರ್ 16: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
- ಅಕ್ಟೋಬರ್ 17: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
- ಅಕ್ಟೋಬರ್ 18: ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.
- ಅಕ್ಟೋಬರ್ 19: ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಆದರೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿಗೂ ಮಳೆ ಮುನ್ಸೂಚನೆ
ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಪ್ರಭಾವ ಕಡಿಮೆಯಾಗಿದ್ದು, ಇದೀಗ ಈಶಾನ್ಯ ಮಾರುತಗಳು ದಕ್ಷಿಣ ಭಾರತದಲ್ಲಿ ಪ್ರಭಾವ ಬೀರಲು ಆರಂಭಿಸಿವೆ. ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತವು ತಮಿಳುನಾಡು ಕರಾವಳಿ ದಾಟಿ ಒಳನಾಡಿನತ್ತ ಚಲಿಸುವ ನಿರೀಕ್ಷೆಯಿದೆ. ಇದರ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಬಹುದು. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಅಲ್ಲಲ್ಲಿ ಮಳೆಯಾಗಬಹುದು.
ತಾಪಮಾನ ಇಳಿಕೆಯಾಗುವ ಸಾಧ್ಯತೆ
ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿತ್ತು. ಕಲಬುರಗಿಯಲ್ಲಿ ಸುಮಾರು 36 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 39 ಡಿಗ್ರಿ ಸೆಲ್ಸಿಯಸ್, ಹೊನ್ನಾವರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಮುಂಬರುವ ಮಳೆಯಿಂದಾಗಿ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಮುಂಜಾನೆ ದಟ್ಟ ಮಂಜು ಕವಿಯುವ ಪ್ರದೇಶಗಳಲ್ಲಿ ವಾಹನ ಸವಾರರು ಎಚ್ಚರಿಕೆ ವಹಿಸಬೇಕು. ಮಳೆಯಿಂದ ಬೆಳೆಗಳಿಗೆ ಹಾನಿಯಾಗದಂತೆ ಕಟಾವು ಮಾಡಿದ ಹಾಗೂ ಕಟಾವಿಗೆ ಬಂದಿರುವ ಬೆಳೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿಡುವಂತೆ ರೈತರಿಗೆ ಸಲಹೆ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:57 pm, Thu, 15 October 26




