
ಬೆಂಗಳೂರು, ಅಕ್ಟೋಬರ್ 15: ಕರ್ನಾಟಕದಲ್ಲಿ ಈಶಾನ್ಯ ಮಾರುತಗಳ ಪ್ರಭಾವ ಆರಂಭವಾಗುತ್ತಿದ್ದು, ಅಕ್ಟೋಬರ್ 19ರವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ತಜ್ಞ ಸಿಎಸ್ ಪಾಟೀಲ್ ಅವರ ಮಾಹಿತಿ ಪ್ರಕಾರ, ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಪ್ರಭಾವ ಕಡಿಮೆಯಾಗಿದ್ದು, ಇದೀಗ ಈಶಾನ್ಯ ಮಾರುತಗಳು ದಕ್ಷಿಣ ಭಾರತದಲ್ಲಿ ಪ್ರಭಾವ ಬೀರಲು ಆರಂಭಿಸಿವೆ. ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತವು ತಮಿಳುನಾಡು ಕರಾವಳಿ ದಾಟಿ ಒಳನಾಡಿನತ್ತ ಚಲಿಸುವ ನಿರೀಕ್ಷೆಯಿದೆ. ಇದರ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಬಹುದು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಅಲ್ಲಲ್ಲಿ ಮಳೆಯಾಗಬಹುದು.
ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿತ್ತು. ಕಲಬುರಗಿಯಲ್ಲಿ ಸುಮಾರು 36 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 39 ಡಿಗ್ರಿ ಸೆಲ್ಸಿಯಸ್, ಹೊನ್ನಾವರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಮುಂಬರುವ ಮಳೆಯಿಂದಾಗಿ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಮುಂಜಾನೆ ದಟ್ಟ ಮಂಜು ಕವಿಯುವ ಪ್ರದೇಶಗಳಲ್ಲಿ ವಾಹನ ಸವಾರರು ಎಚ್ಚರಿಕೆ ವಹಿಸಬೇಕು. ಮಳೆಯಿಂದ ಬೆಳೆಗಳಿಗೆ ಹಾನಿಯಾಗದಂತೆ ಕಟಾವು ಮಾಡಿದ ಹಾಗೂ ಕಟಾವಿಗೆ ಬಂದಿರುವ ಬೆಳೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿಡುವಂತೆ ರೈತರಿಗೆ ಸಲಹೆ ನೀಡಲಾಗಿದೆ.
Published On - 2:57 pm, Thu, 15 October 26