
ಬೆಂಗಳೂರು, ಸೆಪ್ಟೆಂಬರ್ 28: ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದರೂ, ಮಧ್ಯಾಹ್ನದ ಬಳಿಕ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಗುಡುಗು-ಮಿಂಚು ಹಾಗೂ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28 ಮತ್ತು 29ರಂದು ಮಳೆಯ ಸಾಧ್ಯತೆ ಇದೆ.
ಸೆಪ್ಟೆಂಬರ್ 28ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಕೆಲವೆಡೆ ಹಗುರ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು-ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ಇರಬಹುದು.
ದಕ್ಷಿಣ ಒಳನಾಡಿನಲ್ಲಿ ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸೆಪ್ಟೆಂಬರ್ 29ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು-ಮಿಂಚು ಹಾಗೂ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು.
ದಕ್ಷಿಣ ಒಳನಾಡಿನಲ್ಲಿ ಹಾಸನ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಸೆಪ್ಟೆಂಬರ್ 27ರ ಸಂಜೆಗೆ ಕೊನೆಗೊಂಡಂತೆ ರಾಜ್ಯದ ಕೆಲವೆಡೆ ಮಾತ್ರ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಉಚ್ಚಂಗಿದುರ್ಗದಲ್ಲಿ 1 ಸೆಂ.ಮೀ. ಮಳೆಯಾಗಿದ್ದು ಬಿಟ್ಟರೆ ಬೇರೆಲ್ಲೂ ಮಳೆ ದಾಖಲಾಗಿಲ್ಲ.
ಹೀಗಾಗಿ ರಾಜ್ಯದ ಅನೇಕ ಕಡೆ ಬಿಸಿಲಿನ ವಾತಾವರಣ ಮುಂದುವರಿದರೂ, ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದು ಗುಡುಗು-ಮಿಂಚಿನೊಂದಿಗೆ ಮಳೆ ಸುರಿಯುವ ಸಾಧ್ಯತೆಯಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ