Karnataka Weather: ಕರಾವಳಿಯಲ್ಲಿ ಐದು ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ​​

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಕರಾವಳಿಯಲ್ಲಿ ಐದು ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ​​
ಸಾಂದರ್ಭಿಕ ಚಿತ್ರ

Updated on: Jul 19, 2023 | 6:50 AM

ಬೆಂಗಳೂರು: ಕರಾವಳಿಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ ಕರಾವಳಿ (Coastal) ಜಿಲ್ಲೆಗಳಾದ ದಕ್ಷಿಣ ಕನ್ನಡ (Dakshin Kannada), ಉಡುಪಿ (Udupi) ಮತ್ತು ಉತ್ತರ ಕನ್ನಡ (Uttar Kannada) ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​ ಘೋಷಣೆ ಮಾಡಲಾಗಿದೆ. ಹಾಗೇ ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 40 ರಿಂದ 45 ಕಿಮೀ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡು ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಬೆಳಗಾವಿ, ಬೀದರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ. ಹಾಗೆ ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ.

ಇದನ್ನೂ ಓದಿ: Mangaluru News: ರಾಜ್ಯದ ಕರಾವಳಿಯಲ್ಲಿ ಕಡಲ್ಕೊರೆತ ತಡೆಗಟ್ಟಲು ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿ

ದಕ್ಷಿಣ ಒಳನಾಡು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ. ಆದರೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಹಿನ್ನೆಲೆ ಯೆಲ್ಲೋ ಅಲರ್ಟ್​​​ ಘೋಷಿಸಲಾಗಿದೆ. ಗಾಳಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಸಿದ್ದಾಪುರ ತಾಲೂಕಿನ ನಿಲ್ಕುಂದ, ಸೂಪಾ ತಾಲೂಕಿನ ಕ್ಯಾಸಲ್‌ರಾಕ್ ಮತ್ತು ಸಿದ್ದಾಪುರ ತಾಲೂಕಿನ ಕೋಡ್ಕಣಿಯಲ್ಲಿ 87, 81 ಮತ್ತು 77.5 ಮಿಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 am, Wed, 19 July 23