ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಕಳೆದೊಂಡು ದಿನದಿಂದಲೇ ಭಾರೀ ಮಳೆಯಾಗುತ್ತಿದ್ದು, ಜೂನ್ 17ರವರೆಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಮುಂಜಾನೆಯಿಂದಲೂ ಕರಾವಳಿಯ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಮಳೆಯ ಆರ್ಭಟಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಅನೇಕ ಮನೆಗಳೂ ಹಾನಿಗೊಂಡಿವೆ.
ಕರಾವಳಿಯ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ (ಜೂನ್ 13) ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರದಂದು ರೆಡ್ ಅಲರ್ಟ್ ಕೂಡ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಮತ್ತು 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉಳಿದ ದಿನಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.
ಉತ್ತರ ಒಳನಾಡಿನಲ್ಲಿ ಕೂಡ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಜೂನ್ 14ರಿಂದ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮುಂಗಾರು ಮಳೆ ಆಗುತ್ತಿದೆ. ಹೀಗಾಗಿ, ಕೊಡಗು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನದಿ ತೀರದಲ್ಲಿರುವವರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಗದಗ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಮಳೆ ಸುರಿದಿದೆ. ಇದರಿಂದ, ಬಿತ್ತನೆ ಮಾಡಿದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಕೊಪ್ಪಳದಲ್ಲಿ ಜಿಟಿ ಜಿಟಿ ಮಳೆಯಾಗಿದೆ. ನಗರದಾದ್ಯಂತ ಮಳೆ ಸುರಿದಿದ್ದು, ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ವಿಜಯಪುರ ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಕೀರ್ತಿ ನಗರ, ಜಲನಗರ, ಹಾಗೂ ಸ್ಟೇಶನ್ ರಸ್ತೆಯಲ್ಲಿ ಜೋರಾಗಿ ಮಳೆಯಾಗಿದೆ. ಬೆಂಗಳೂರಿನ ಟಿ.ದಾಸರಹಳ್ಳಿ ಸುತ್ತಮುತ್ತಲೂ ಭಾರಿ ಮಳೆಯಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಜಿಲ್ಲೆಯಲ್ಲಿ 24 ಗಂಟೆಯಲ್ಲಿ 84 ಮಿಲಿ ಮೀಟರ್ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 3 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರಿಗೆ ಉಡುಪಿ ಜಿಲ್ಲಾಡಳಿತದಿಂದ ಮುನ್ಸೂಚನೆ ನೀಡಲಾಗಿದೆ. ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು 57 ಮಿ.ಮೀ. ಮಳೆಯಾಗಿದ್ದರೆ, ಬ್ರಹ್ಮಾವರ ತಾಲೂಕಿನಲ್ಲಿ 52 ಮಿಲಿ ಮೀಟರ್ ಮಳೆಯಾಗಿದೆ.
ಇದನ್ನೂ ಓದಿ: Viral Video: ಮನೆ ಮುಂದೆ ನಿಲ್ಲಿಸಿದ ಕಾರು ನೋಡನೋಡುತ್ತಿದ್ದಂತೆಯೇ ಮಾಯ! ಮಳೆ ನೀರು ತಂದ ಅವಾಂತರ ನೀವೂ ನೋಡಿ
Published On - 6:00 pm, Sun, 13 June 21