Karnataka Weather Today: ಕರಾವಳಿಯಲ್ಲಿ ಆ. 16ರವರೆಗೆ ವರುಣನ ಆರ್ಭಟ; ಕೊಡಗಿನಲ್ಲಿ ದಾಖಲೆಯ ಮಳೆ

Karnataka Rain: ಉತ್ತರ ಒಳನಾಡಿನಲ್ಲಿ ಆ. 17ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ. ಇಂದಿನಿಂದ ಆಗಸ್ಟ್ 16ರವರೆಗೆ ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

Karnataka Weather Today: ಕರಾವಳಿಯಲ್ಲಿ ಆ. 16ರವರೆಗೆ ವರುಣನ ಆರ್ಭಟ; ಕೊಡಗಿನಲ್ಲಿ ದಾಖಲೆಯ ಮಳೆ
ಗ್ರಾಮಗಳಲ್ಲಿ ಪ್ರವಾಹ ಭೀತಿ
Follow us
| Updated By: Skanda

Updated on: Aug 14, 2021 | 6:22 AM

Karnataka Rains: ಬೆಂಗಳೂರು: ಹಲವು ದಿನಗಳಿಂದ ಕೊಂಚ ಕಡಿಮೆಯಾಗಿದ್ದ ಮಳೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಹೆಚ್ಚಾಗಲಿದೆ. ಇಂದಿನಿಂದ ಆಗಸ್ಟ್ 16ರವರೆಗೆ ಕರಾವಳಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿಗಿಂತಲೂ ಕರಾವಳಿಯಲ್ಲಿ ಮಳೆ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಉತ್ತರ ಒಳನಾಡಿನಲ್ಲಿ ಆ. 17ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ. ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಇಂದಿನಿಂದ ಆ. 16ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಕೂಡ ಇಂದು ಮಳೆ ಮುಂದುವರೆಯಲಿದೆ.

ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಬೆಂಗಳೂರಿನಲ್ಲಿ 209 ಸೂಕ್ಷ್ಮ ವಲಯಗಳನ್ನು ಗುರುತಿಸಲಾಗಿದ್ದು, ಮಳೆ ಬಂದರೆ ಈ ಭಾಗಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುವುದರಿಂದ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಈ ವರ್ಷ ಕೊಡಗಿನಲ್ಲಿ ದಾಖಲೆಯ ಪ್ರಮಾಣದ ಮಳೆಯಾಗಿದೆ.

ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ. ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಭಾರೀ ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೆಚ್ಚು ನಷ್ಟವಾಗಿದೆ.

ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜಾರ್ಖಂಡ್, ಬಿಹಾರ, ಒರಿಸ್ಸಾ, ಆಂಧ್ರಪ್ರದೇಶ, ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಭಾನುವಾರದವರೆಗೂ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.

ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ದಾಖಲೆಯ ಪ್ರಮಾಣದ ಮಳೆಯಾಗಿದೆ. ಕೊಡಗಿನಲ್ಲಿ ಮಳೆಯಾಗಿರುವುದರಿಂದ ಹಾರಂಗಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ.

ಇದನ್ನೂ ಓದಿ: Bengaluru Rain: ಅನಿರೀಕ್ಷಿತ ಮಳೆಯಿಂದ ತಂಪಾಯ್ತು ಬೆಂಗಳೂರು; ನಾಳೆಯೂ ತುಂತುರು ಮಳೆ ಸಾಧ್ಯತೆ

Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ಮಳೆ ಸಾಧ್ಯತೆ; ಕೇರಳ, ತಮಿಳುನಾಡು, ಆಂಧ್ರದಲ್ಲೂ ವರುಣನ ಆರ್ಭಟ

(Karnataka Weather Today Heavy Rain in Coastal Karnataka till August 16 Bengaluru Rains Karnataka Rain)