Karnataka Rains: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆ ಸುರಿಯುತ್ತಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ವರುಣನ ಆರ್ಭಟ (Heavy Rain) ಹೆಚ್ಚಾಗಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆ. 15ರವರೆಗೂ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಬೇರೆ ಜಿಲ್ಲೆಗಳಿಗಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ 8-10 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿ, ಕಳಸ, ಹೊರನಾಡು, ಮೂಡಿಗೆರೆ, ಕೊಟ್ಟಿಗೆಹಾರ, ಕೊಡಗಿನ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಕುಶಾಲನಗರ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಮಳೆಯ ಅಬ್ಬರ ಮಿತಿ ಮೀರಿದ್ದು, ನದಿಗಳು ಉಕ್ಕಿ ಹರಿಯುತ್ತಿದೆ.
ಹಾಗೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಮಳೆಯ ಆರ್ಭಟ ಸೆ. 15ರವರೆಗೆ ಇರಲಿದೆ. ಕರ್ನಾಟಕದಲ್ಲಿ ಜುಲೈನಲ್ಲಿ ಶೇ. 7ರಷ್ಟು, ಆಗಸ್ಟ್ನಲ್ಲಿ ಶೇ. 24ರಷ್ಟು ಮಳೆಯ ಕೊರತೆ ಉಂಟಾಗಿದೆ. ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ.
ಭೀಮಾ ನದಿಯಲ್ಲಿ ಮತ್ತೆ ಪ್ರವಾಹದ ಆತಂಕ ಎದುರಾಗಿದ್ದು, ಭೀಮಾ ನದಿ ತೀರಕ್ಕೆ ಯಾರೂ ತೆರಳದಂತೆ ಹಾಗೂ ಮೀನುಗಾರಿಕೆ ಮಾಡದಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆ ನೀಡಿದ್ದಾರೆ. ಮುಂದಿನ ವಾರದಿಂದ ಅಕ್ಟೋಬರ್ ಎರಡನೇ ವಾರದವರೆಗೆ ಭೀಮಾ ನದಿಯ ನೀರಿನ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಜನತೆಗೆ ಡಿಸಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ಗುಜರಾತ್, ಮಹಾರಾಷ್ಟ್ರ, ಗೋವಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಅಂಡಮಾನ್ ನಿಕೋಬಾರ್ ರಾಜ್ಯಗಳಲ್ಲಿ ಇಂದು ವಿಪರೀತ ಮಳೆಯಾಗಲಿದೆ. ಹಾಗೇ, ಸಿಕ್ಕಿಂ, ಮಿಜೋರಾಂ, ಲಕ್ಷದ್ವೀಪ, ಅಸ್ಸಾಂ, ದೆಹಲಿ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಬಿಹಾರ, ಉತ್ತರ ಪ್ರದೇಶ, ಹರಿಯಾಣ, ಹಿಮಾಚಲಪ್ರದೇಶ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಲಡಾಖ್, ತಮಿಳುನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.
Delhi Rain: ದೆಹಲಿಯಲ್ಲಿ ವಿಪರೀತ ಮಳೆಗೆ ಜನ ತತ್ತರ; ಚರಂಡಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವು
(Heavy Rainfall in 7 Districts of Karnataka till September 15 Yellow Alert Karnataka Rain)