Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಸುರಿಯಲಿದೆ ಧಾರಾಕಾರ ಮಳೆ; ಬೆಂಗಳೂರಿಗೂ ವರುಣ ದರ್ಶನ ಭಾಗ್ಯ

| Updated By: Skanda

Updated on: Jul 03, 2021 | 8:15 AM

ಕಳೆದೊಂದು ವಾರದಲ್ಲಿ ಮಳೆಯ ವಾತಾವರಣ ಮರುಕಳಿಸಿದ್ದು ಮಲೆನಾಡು ಭಾಗದಲ್ಲಿ ನಿನ್ನೆ ಉತ್ತಮ ಮಳೆಯಾಗಿದೆ. ಅಂತೆಯೇ, ಇಂದು ಸಹ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ.

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಸುರಿಯಲಿದೆ ಧಾರಾಕಾರ ಮಳೆ; ಬೆಂಗಳೂರಿಗೂ ವರುಣ ದರ್ಶನ ಭಾಗ್ಯ
ಹವಾಮಾನ ವರದಿ
Follow us on

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿ ಒಂದು ತಿಂಗಳೂ ಕಳೆದಿದೆ. ಆರಂಭದಲ್ಲಿ ಧಾರಾಕಾರವಾಗಿ ಸುರಿದ ಮಳೆ ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ನೀಡಿತ್ತಾದರೂ ಇದೀಗ ಮತ್ತೆ ಜೋರಾಗುವ ಮುನ್ಸೂಚನೆ ಲಭಿಸಿದೆ. ಕಳೆದೊಂದು ವಾರದಲ್ಲಿ ಮಳೆಯ ವಾತಾವರಣ ಮರುಕಳಿಸಿದ್ದು ಮಲೆನಾಡು ಭಾಗದಲ್ಲಿ ನಿನ್ನೆ ಉತ್ತಮ ಮಳೆಯಾಗಿದೆ. ಅಂತೆಯೇ, ಇಂದು ಸಹ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು ಮುನ್ಸೂಚನೆ ನೀಡಿವೆ.

ಮುಂಗಾರು ಆರಂಭವಾಗುತ್ತಿದ್ದಂತೆಯೇ ಸಹಜವಾಗಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಹೆಚ್ಚೂಕಡಿಮೆ ಜೂನ್ ಮಧ್ಯದವರೆಗೆ ಭಾರೀ ಪ್ರಮಾಣದಲ್ಲಿ ಸುರಿದಿದ್ದ ಮಳೆ ನಂತರ ಕ್ರಮೇಣ ಇಳಿಕೆಯಾಗಿದೆ. ಆದರೆ, ಕಳೆದ ಒಂದು ವಾರದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿರುವುದನ್ನು ನೋಡಿದರೆ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಸೂಚನೆ ಪ್ರಕಾರ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಜುಲೈ 5ರವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲೂ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಇನ್ನೆರಡು ದಿನಗಳ ಕಾಲ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಕಳೆದ ಒಂದು ವಾರದಿಂದಲೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ಕೆಲ ಭಾಗದಲ್ಲಿ ಉತ್ತಮ ಮಳೆಯಾಗಿತ್ತು.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಭಾಗವಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಉತ್ತಮ ಮಳೆಯಾಗಲಿದೆ. ಮೂರ್ನಾಲ್ಕು ದಿನಗಳಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೆಚ್ಚಾಗಿದ್ದ ಮಳೆ ಅಲ್ಲಿ ಇಂದಿನಿಂದ ಕೊಂಚ ಕಡಿಮೆಯಾಗಲಿದೆ. ಆದರೆ, ನೈರುತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಈಗಾಗಲೇ ಅಕ್ಕಪಕ್ಕದ ರಾಜ್ಯಗಳು ಹಾಗೂ ದೇಶದ ಉತ್ತರ ಭಾಗದ ಕೆಲ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಒಡಿಶಾ, ಭುವನೇಶ್ವರದಲ್ಲಿ ಒಂದು ವಾರದಿಂದ ಭಾರೀ ಪ್ರಮಾಣದ ಮಳೆ ಸುರಿದಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೆ ನೀರು ನುಗ್ಗಿ ಅವ್ಯವಸ್ಥೆಯಾಗಿದೆ. ಜತೆಗೆ, ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ರಾಜ್ಯಗಳಲ್ಲೂ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:
Monsoon ಈ ತಿಂಗಳಲ್ಲಿ ಸಾಧಾರಣ ಮುಂಗಾರು ಸಾಧ್ಯತೆ; ಎರಡನೇ ವಾರದಲ್ಲಿ ಅಬ್ಬರಿಸಲಿದೆ ಮಳೆ