Karnataka Weather: ಮುಂಗಾರು ಮಳೆ ಆರ್ಭಟಕ್ಕೆ ಮಲೆನಾಡು, ಕರಾವಳಿ ತತ್ತರ; ವಾಯುಭಾರ ಕುಸಿತದಿಂದ ಬೆಂಗಳೂರಿನಲ್ಲಿ ಮಳೆ
Karnataka Rains Today: ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ. ಮಳೆಯಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ತುಂತುರು ಮಳೆಯಾಗುತ್ತಿದೆ. ಆದರೆ ಅದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿದೆ.
ಮಂಗಳೂರು: ಕರ್ನಾಟಕದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಭರ್ಜರಿಯಾಗಿದೆ, ಮಳೆಯ ಅಬ್ಬರ ಜೋರಾಗಿದೆ. ರಾಜ್ಯಕ್ಕೆ ದಟ್ಟ ಮಳೆಗಾಲ ಕಾಲಿಟ್ಟಿದ್ದು, ಇನ್ನು 2 ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ಕರಾವಳಿ ಪ್ರದೇಶ ಮತ್ತು ಮಲೆನಾಡಿನಲ್ಲಿ ಎರಡು-ಮೂರು ದಿನಗಳಿಂದ ಎಡೆಬಿಡದಂತೆ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿಯೂ ತುಂತುರು ಮಳೆಯಾಗುತ್ತಿದೆ. ಆದರೆ ಅದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿದೆ. ಭಾರೀ ಮಳೆಯಿಂದ ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಹಾಗೂ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜೂನ್ 17ರವರೆಗೆ ರೆಡ್ ಅಲರ್ಟ್ನಲ್ಲಿರುವ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಿಂದ ಅನೇಕ ಮನೆ, ರಸ್ತೆಗಳು ಹಾನಿಯಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಜಲಾಶಯಗಳಿಗೆ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತಿವೆ. ಧಾರಾಕಾರ ಮಳೆಯಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏರಿದೆ. ಹೊಸನಗರ, ತೀರ್ಥಹಳ್ಳಿ, ಸಾಗರದಲ್ಲಿ ಭಾರಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯಕ್ಕೆ 13,173 ಕ್ಯೂಸೆಕ್ ನೀರು ಹರಿದುಬಂದಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದ ಉಡುಪಿ, ಒಡಿಶಾ, ಕೇರಳದ ಕೋಯಿಕ್ಕೋಡ್, ವಯನಾಡಿನಲ್ಲಿ ಇಂದು ಮಳೆ ಅಧಿಕವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈ ವರ್ಷ ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿದ್ದ ನೈಋತ್ಯ ಮಾನ್ಸೂನ್ ಜೂನ್ 6ರಂದು ಕರ್ನಾಟಕವನ್ನು ಪ್ರವೇಶಿಸಿತ್ತು.
ಇನ್ನು ರಾಜ್ಯದ ಉತ್ತರ ಭಾಗದ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಹಳದಿ ಅಲರ್ಟ್ ಹೊರಡಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ (ಜೂನ್ 16 ಹಾಗೂ 17) ಆರೆಂಜ್ ಅಲರ್ಟ್ ಇದೆ. ಉಳಿದ ದಿನಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ. ಶಿವಮೊಗ್ಗದ ಹೊಸನಗರ, ಸಾಗರ, ತೀರ್ಥಹಳ್ಳಿ, ಚಿಕ್ಕಮಗಳೂರಿನ ಬಾಳೆಹೊನ್ನೂರು, ಕೊಪ್ಪ, ಕಳಸ, ಶೃಂಗೇರಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.
ಕೊಡಗು ಜಿಲ್ಲೆಯಲ್ಲಿಯೂ ಮಳೆ ಪ್ರಮಾಣ ಹೆಚ್ಚಾಗಿದ್ದು, ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮಲೆನಾಡಿನಲ್ಲಿ ಮಳೆ ಅಬ್ಬರಕ್ಕೆ ಅನೇಕ ಕಡೆಗಳಲ್ಲಿ ತೋಟಗಳು ಕೊಚ್ಚಿಹೋಗಿವೆ. ಉತ್ತರ ಒಳನಾಡಿನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಒಳನಾಡಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. Monsoon 2021: ಅವಧಿಗೂ ಮುನ್ನವೇ ಮುಂಗಾರು ಪ್ರವೇಶ; ಚಂಡಮಾರುತದ ಬೆನ್ನಲ್ಲೇ ಮಳೆಗಾಲ ಶುರುವಾಗುವ ಸಾಧ್ಯತೆ (Karnataka Weather Today monsoon 2021 on june 16)
Published On - 8:53 am, Wed, 16 June 21