ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಮಳೆಗಾಲದ ವಾತಾವರಣ ಮತ್ತೆ ಮರುಕಳಿಸಿದ್ದು, ಎಲ್ಲೆಡೆ ವರುಣನ ಆರ್ಭಟ ಜೋರಾಗುತ್ತಿದೆ. ಮುಂಗಾರಿನ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಸುರಿದಿದ್ದ ಮಳೆ ಕೆಲ ದಿನಗಳ ನಂತರ ಸಂಪೂರ್ಣ ಬಿಡುವು ನೀಡಿತ್ತು. ಆದರೆ, ಈಗ ಮಳೆ (Karnataka Rain) ಮತ್ತೆ ಚುರುಕುಗೊಂಡಿದ್ದು ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯ ಜತೆಗೆ ಗಾಳಿಯ ರಭಸವೂ ಹೆಚ್ಚಾಗಿದೆ. ಮಲೆನಾಡು ಭಾಗದಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಜೋರಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು (ಜುಲೈ 12, ಸೋಮವಾರ) ಮತ್ತು ನಾಳೆ (ಜುಲೈ 13, ಮಂಗಳವಾರ) ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು (Karnataka Weather Report) ಮುನ್ಸೂಚನೆ ನೀಡಿವೆ.
ಇಂದು ಕೊಡಗು ಸೇರಿದಂತೆ ಕರಾವಳಿ ಮತ್ತು ಮಲೆನಾಡಿನ ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ. ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.
ಜುಲೈ 15ರ ತನಕ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ಕೊಡಲಾಗಿದೆ. ಮುಂದಿನ ಒಂದು ವಾರ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರೆಡು ದಿನಗಳಿಂದ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ಹಲವೆಡೆ ವಿದ್ಯುತ್ ಕಂಬಗಳು, ಮರಗಳು ಧರೆಗೆ ಉರುಳಿದ್ದು ಅವ್ಯವಸ್ಥೆ ಆಗಿದೆ. ಕೆಲವೆಡೆ ರಸ್ತೆ ಸಂಪರ್ಕ ಕೂಡಾ ಕಡಿತಗೊಂಡಿದೆ.
ಮಳೆ ಜೋರಾದ ಪರಿಣಾಮ ನದಿಗಳು ಮೈದುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಮುಂದಿನ ದಿನಗಳಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇರುವುದರಿಂದ ಈ ಬಾರಿ ನೀರಿಗೆ ಕೊರತೆಯಾಗುವುದಿಲ್ಲ ಎನ್ನುವ ಭರವಸೆಯಲ್ಲಿ ರೈತರಿದ್ದಾರೆ. ಕಳೆದೆರಡು ದಿನಗಳಿಂದ ಕೃಷ್ಣಾ ನದಿ ಅಚ್ಚುಕಟ್ಟಿನ ಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಇದರಿಂದಾಗಿ ಆಲಮಟ್ಟಿ ಭಾಗದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿರುವಂತೆಯೇ ರಾಜಧಾನು ಬೆಂಗಳೂರಿನಲ್ಲಿಯೂ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ತಂಪಾದ ವಾತಾವರಣ ಇದೆ. ಸದ್ಯ ಇನ್ನೂ ಒಂದು ವಾರ ಇದೇ ರೀತಿ ಮಳೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.
ಶಿವಮೊಗ್ಗ ಜಿಲ್ಲೆಯ ಆಗುಂಬೆ, ತೀರ್ಥಹಳ್ಳಿ, ಹೊಸನಗರ, ನಗರ, ಸಾಗರ, ಕೋಣಂದೂರು, ಸೊರಬ, ಶಿಕಾರಿಪುರ ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಕಾಪು, ಬೈಂದೂರು ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಕಳಸ, ಶೃಂಗೇರಿ, ಕೊಪ್ಪ, ಮೂಡಿಗೆರೆ, ಮತ್ತು ಎನ್.ಆರ್.ಪುರ ಭಾಗದಲ್ಲಿಯೂ ಅಧಿಕ ಮಳೆಯಾಗುತ್ತಿದೆ.
ಈ ವರ್ಷ ನೈರುತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿ ಇರಲಿದ್ದು ಕೆಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ ಭಾರತದ ಪೂರ್ವ ಭಾಗ ಮತ್ತು ಈಶಾನ್ಯ ಭಾಗದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆಯಾಗಿ ಸೆಪ್ಟೆಂಬರ್ ತನಕ ದೇಶದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:
Karnataka Weather Report: ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆ ನಿರೀಕ್ಷೆ; ರಾಜ್ಯದ ಹವಾಮಾನ ವರದಿ ಇಲ್ಲಿದೆ