
ಬೆಂಗಳೂರು: ಕರ್ನಾಟಕದಲ್ಲಿ ಚಳಿಯ ಜೊತೆಗೆ ಮಳೆಯೂ ಶುರುವಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಇಂದು ಮಳೆ ಸುರಿಯಲಿದೆ. ಶ್ರೀಲಂಕಾದ ಕರಾವಳಿ, ನೈಋತ್ಯದ ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇಂದು ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಟಿವಿ9ಗೆ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.
ನೆರೆಯ ರಾಜ್ಯವಾದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಅಸ್ಸಾಂ, ಮೇಘಾಲಯದಲ್ಲಿ ಮಳೆ ಹೆಚ್ಚಾಗಿದೆ. ತಮಿಳುನಾಡಿನಲ್ಲಿ ಸುರಿದ ಮಳೆಗೆ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪೇಟೆಯಲ್ಲಿ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದ ದಕ್ಷಿಣ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ಕಾರೈಕಾಲ್ ಮತ್ತು ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಚೆನ್ನೈನಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಶೀತಗಾಳಿಯ ಜೊತೆಗೆ ಹಗುರ ಮಳೆಯೂ ಸುರಿಯುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆಯಾಗುವ ನಿರೀಕ್ಷೆಯಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಡಿಸೆಂಬರ್‌ನಲ್ಲಿ ಉತ್ತರ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಚಳಿಗಾಲ ಇರಲಿದೆ. ರಾಜಸ್ಥಾನದ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಚಳಿ ಹೆಚ್ಚಾಗಲಿದೆ. ಮಹಾರಾಷ್ಟ್ರದ ಜಿಲ್ಲೆಗಳಾದ್ಯಂತ ಆಲಿಕಲ್ಲು ಮಳೆ, ಗುಡುಗು ಸಹಿತ ಮಿಂಚಿನ ಮಳೆಯಾಗಿದೆ. ಇಂದು ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಶೀತ ಗಾಳಿ ಉಂಟಾಗಲಿದೆ.
ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇಂದು ಮಳೆ ಮತ್ತು ಹಿಮಪಾತವಾಗಲಿದೆ. ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ದೆಹಲಿ, ಪಂಜಾಬ್, ರಾಜಸ್ಥಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಇಂದು ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಆದರೆ, ರಾಜಸ್ಥಾನದಲ್ಲಿ ಇಂದು ತೀವ್ರ ಚಳಿ ಉಂಟಾಗಲಿದೆ.
ಕರ್ನಾಟಕದ ಕರಾವಳಿ, ಬೆಂಗಳೂರು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಚಳಿಯೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: Karnataka Dam Water Level: ಬೆಂಗಳೂರಿನಲ್ಲಿ ಹಗುರ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಚಳಿಗಾಲದಲ್ಲಿ ಉಂಟಾಗುವ ತ್ವಚೆಯ ಸಮಸ್ಯೆ ಬಗ್ಗೆ ಹೆಚ್ಚಿನ ಯೋಚನೆ ಅಗತ್ಯ ಇಲ್ಲ; ಪರಿಹಾರಕ್ಕಾಗಿ ತೆಂಗಿನ ಎಣ್ಣೆ ಬಳಸಿ