Bengaluru Rain: ಸಂಕ್ರಾಂತಿಯ ಬೆನ್ನಲ್ಲೇ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತಿದೆ. ಇಂದು (ಜ. 16) ಮತ್ತು ನಾಳೆ ಬೆಂಗಳೂರು, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ಇಂದಿನಿಂದ 4 ದಿನ ತಮಿಳುನಾಡು, ಪಂಜಾಬ್, ದೆಹಲಿ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಮುಂದಿನ ನಾಲ್ಕೈದು ದಿನಗಳಲ್ಲಿ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಂದು ತಿಳಿಸಿದೆ. ಆಂಧ್ರಪ್ರದೇಶದಲ್ಲಿ ಜನವರಿ 17ರವರೆಗೆ ಚದುರಿದ ಲಘು / ಸಾಧಾರಣ ಮಳೆಯಾಗಲಿದೆ. ಇಂದು ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಮಾಹೆ ಮತ್ತು ರಾಯಲಸೀಮಾದಲ್ಲಿ ಮುಂದಿನ ನಾಲ್ಕೈದು ದಿನ ಮಳೆಯಾಗಲಿದೆ ಎಂದು ಕೇಂದ್ರದ ಹವಾಮಾನ ಇಲಾಖೆ ತಿಳಿಸಿದೆ.
ಇಂದು ಆಂಧ್ರಪ್ರದೇಶದಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಛತ್ತೀಸ್‌ಗಢ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಮಳೆ ಹೆಚ್ಚಾಗಬಹುದು. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಮಿಂಚು/ಆಲಿಕಲ್ಲು ಸಹಿತ ಮಳೆಯಾಗಲಿದೆ.
ಇಂದು ಪಶ್ಚಿಮ ಹಿಮಾಚಲ ಪ್ರದೇಶ, ರಾಜಸ್ಥಾನ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ದಟ್ಟವಾದ ಮಂಜು ಇರಲಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಮಳೆಯಾಗಲಿದೆ. ಮುಂದಿನ 3-4 ದಿನಗಳಲ್ಲಿ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಳೆಯಾಗಲಿದೆ. ಹಾಗೇ ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಶೀತ ಪರಿಸ್ಥಿತಿಯನ್ನು ನಿರೀಕ್ಷಿಸಲಾಗಿದೆ.
ಮಂಗಳವಾರದವರೆಗೆ ಮಧ್ಯಪ್ರದೇಶ ಮತ್ತು ಪಕ್ಕದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ. ಈ ಅವಧಿಯಲ್ಲಿ ಇತರ ಪ್ರದೇಶಗಳು ಸಾಮಾನ್ಯಕ್ಕಿಂತ ಬೆಚ್ಚಗಿರುತ್ತದೆ ಅಥವಾ ಸ್ವಲ್ಪ ಬೆಚ್ಚಗಿರುತ್ತದೆ. ಆಂಧ್ರಪ್ರದೇಶದಲ್ಲಿ ಅಲ್ಲಲ್ಲಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದ ಮೇಲೆ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಇಂದು ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಚಳಿ ಗಾಳಿ ಇರಲಿದೆ. ಉತ್ತರ ಪ್ರದೇಶದಲ್ಲಿ ದಟ್ಟವಾದ ಮಂಜು ಇರಲಿದೆ. ಪಂಜಾಬ್, ಹರಿಯಾಣ, ದೆಹಲಿ, ಬಿಹಾರ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟವಾದ ಮಂಜು ಇರುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Weather Today: ಬೆಂಗಳೂರು, ಮಲೆನಾಡು ಸೇರಿ ಹಲವೆಡೆ ಇನ್ನೂ 3 ದಿನ ಮಳೆ ಸಾಧ್ಯತೆ