Karnataka Rains: ನಿಲ್ಲದ ವರುಣನ ಆರ್ಭಟ; ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆ

Rain Updates: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಿರುವುದರಿಂದ ಕರ್ನಾಟಕದಲ್ಲೂ ಮಳೆ ಸುರಿಯುತ್ತಿದೆ. ಇನ್ನೂ 4 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದ್ದು, ಇನ್ನೆರಡು ದಿನ ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ನಿಲ್ಲದ ವರುಣನ ಆರ್ಭಟ; ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 03, 2024 | 4:40 PM

ಬೆಂಗಳೂರು: ತಮಿಳುನಾಡಿನಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕದ 12 ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೇ ರೀತಿಯ ಮಳೆ ನಾಳೆ ಕೂಡ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಈಗಾಗಲೇ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಇನ್ನೆರಡು ದಿನ ಮಳೆ ಹೆಚ್ಚಾಗಲಿದೆ.

ಇವತ್ತು, ನಾಳೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 5 ಮತ್ತು 6ರಂದು ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆ ಆಗಲಿದೆ. ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 24 ಹಾಗೂ ಕನಿಷ್ಠ ಉಷ್ಣಾಂಶ 19 ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Mangaluru Rains: ಫೆಂಗಲ್ ಚಂಡಮಾರುತದ ಆರ್ಭಟ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಪ್ರಮುಖವಾಗಿ ಮಂಡ್ಯ ಜಿಲ್ಲೆಯ ಬೆಳ್ಳೂರು ಹಾಗೂ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ತಲಾ 9 ಸೆಂಟಿ ಮೀಟರ್ ಮಳೆಯಾಗಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 6 ಸೆಂಟಿ ಮೀಟರ್ ಮಳೆ ಆಗಿದೆ. ಅರಬ್ಬೀ ಸಮುದ್ರದ ಆಗ್ನೇಯ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದರ ಜೊತೆಗೆ ಗಾಳಿಯ ಪರಿಚಲನೆ 5.8 ಕಿ.ಮೀ ಎತ್ತರದಲ್ಲಿದೆ. ಇದರ ಪರಿಣಾಮದಿಂದ ಕರಾವಳಿ ಜಿಲ್ಲೆಯಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಇಂದು, ನಾಳೆ ವ್ಯಾಪಕ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Chikmagalur Rains: ಮಳೆಯಿಂದ ಚಿಕ್ಕಮಗಳೂರಿನಲ್ಲಿ ನಾಳೆಯಿಂದ ಹಳದಿ ಅಲರ್ಟ್ ಘೋಷಣೆ; ಶಾಲೆಗಳಿಗೆ ರಜೆ

ಈಗಾಗಲೇ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 4ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 5 ಮತ್ತು 6ರಂದು ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಡಿಸೆಂಬರ್ 4ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದೆ. ಸಹಾಯಕ್ಕಾಗಿ ಕಂಟ್ರೋಲ್ ರೂಂ ನಂಬರ್ ‌08262 238950ಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Tue, 3 December 24