ಬೆಂಗಳೂರು: ಉರಿ ಬಿಸಿಲಿನ ನಡುವೆಯೂ ಕರ್ನಾಟಕದ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದು ತೀವ್ರ ಬಿಸಿ ಗಾಳಿ (Heatwave) ಉಂಟಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗಿನಲ್ಲಿ ಹಗುರ ಮಳೆ (Rainfall) ಮುಂದುವರೆಯಲಿದೆ. ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೂಡ ಮಳೆಯ ಮುನ್ಸೂಚನೆ ನೀಡಲಾಗಿದೆ.
ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮೇ 4 ಮತ್ತು 7ರ ವೇಳೆಗೆ ಉಷ್ಣ ಅಲೆ ಉಂಟಾಗಲಿದೆ. ಪಂಜಾಬ್, ಹರಿಯಾಣ, ದೆಹಲಿಯಲ್ಲಿ ಬಿರುಗಾಳಿ, ಗುಡುಗು ಮತ್ತು ಮಳೆಯ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಕೇರಳ, ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣದಲ್ಲಿ ಮುಂದಿನ 2 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 2ರಿಂದ ರಾಜಸ್ಥಾನ, ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಮೇ 2ರಿಂದ 4ರವರೆಗೆ ರಾಜಸ್ಥಾನ, ದೆಹಲಿ, ಪಂಜಾಬ್ ಮತ್ತು ಹರಿಯಾಣದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮಳೆ ಕುರಿತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪಶ್ಚಿಮ ರಾಜಸ್ಥಾನ, ಪಂಜಾಬ್, ಹರಿಯಾಣ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ, ಮಧ್ಯ ಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಹವಾಮಾನ ಇಲಾಖೆ ಇಂದು ‘ಹಳದಿ ಅಲರ್ಟ್’ ಘೋಷಿಸಿದೆ. ಹವಾಮಾನ ಇಲಾಖೆಯ ಪ್ರಕಾರ, ಮೇ 4ರಂದು ಅಂಡಮಾನ್ ನಿಕೋಬಾರ್ ಸಮುದ್ರದಲ್ಲಿ ಚಂಡಮಾರುತ ಉಂಟಾಗಲಿದೆ. ಪೂರ್ವ ಭಾರತದಲ್ಲಿ, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳಲ್ಲಿ ತಾಪಮಾನವು ಈಗಾಗಲೇ ಕುಸಿದಿದೆ.
ಹಾಗೇ, ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ. ಇದಲ್ಲದೆ, ಮಧ್ಯ ಭಾರತ ಮತ್ತು ಉತ್ತರ ಭಾರತದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆಯ ಚಟುವಟಿಕೆಯು ಕಳಪೆ ಮಟ್ಟದಲ್ಲಿದ್ದರೂ, ದಕ್ಷಿಣ ಭಾರತದಲ್ಲಿ ಮಳೆ ಉತ್ತಮವಾಗಿದೆ. ತಮಿಳುನಾಡಿನಲ್ಲಿ ಶೇ. 42, ಕರಾವಳಿ ಕರ್ನಾಟಕದಲ್ಲಿ ಶೇ. 143, ಉತ್ತರ ಒಳ ಕರ್ನಾಟಕದಲ್ಲಿ ಶೇ 43, ದಕ್ಷಿಣ ಒಳನಾಡಿನಲ್ಲಿ ಶೇ. 84ರಷ್ಟು ಹೆಚ್ಚುವರಿ ಮಳೆಯಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಕರ್ನಾಟಕ ಮಾತ್ರವಲ್ಲದೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಕೇರಳದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಲಕ್ಷದ್ವೀಪದಲ್ಲಿ ಮಿಂಚು ಸಹಿತ ಚದುರಿದ ಮಳೆಯ ಮುನ್ಸೂಚನೆ ಇದೆ. ಉತ್ತರಾಖಂಡದಲ್ಲಿ ಚದುರಿದ ಮಳೆ ಅಥವಾ ಹಿಮ ಸಹಿತ ಮಳೆಯ ಸಂಭವವಿದೆ.
ಒಡಿಶಾ, ಬಿಹಾರ, ಜಾರ್ಖಂಡ್, ಪೂರ್ವ ಉತ್ತರ ಪ್ರದೇಶ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಪಶ್ಚಿಮ ರಾಜಸ್ಥಾನದಲ್ಲಿ ತೀವ್ರ ಶಾಖದ ವಾತಾವರಣದ ಸಾಧ್ಯತೆಯಿದೆ. ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದ ಉತ್ತರ ಒಳನಾಡಿನಲ್ಲಿ ಬಿಸಿ ಗಾಳಿ ಹೆಚ್ಚಾಗಲಿದೆ.