
ಬೆಂಗಳೂರು, ಏಪ್ರಿಲ್ 12: ಬೇಸಿಗೆಗಾಲದಲ್ಲಿ (Summer) ಮಳೆರಾಯನ (Rain) ಆರ್ಭಟ ಜೋರಾಗಿಯೇ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದೆ. ಶುಕ್ರವಾರ (ಏ.11) ಸಂಜೆ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವು ನಗರಗಳಲ್ಲಿ ಮಳೆಯಾಗಿತ್ತು. ಈ ಮಳೆ ಇಂದೂ (ಏ.12) ಕೂಡ ಮುಂದುವರೆಯಲಿದೆ. ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಕೋಲಾರ, ಮೈಸೂರು, ರಾಮನಗರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಗೇ, ಮುಂದಿನ ಮೂರು ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಕೊಪ್ಪಳದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಹಾಗೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದೆ.
ಇದನ್ನೂ ನೋಡಿ: ಚಿಕ್ಕಮಗಳೂರು ಮಳೆ ಅವಾಂತರ: ಪ್ರಪಾತಕ್ಕೆ ಉರುಳಿದ ಕೆಎಸ್ಆರ್ಟಿಸಿ ಬಸ್
ಏಪ್ರಿಲ್ 11 ರಂದು ದಾವಣಗರೆ ಗ್ರಾಮಾಂತರ ಮತ್ತು ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ 42.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ರಾಯಚೂರು ಜಿಲ್ಲೆಯ 17 ಪ್ರದೇಶಗಳಲ್ಲಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಯ ಒಂದು ಪ್ರದೇಶದಲ್ಲಿ, ಯಾದಗಿರಿ ಜಿಲ್ಲೆಯ 8 ಸ್ಥಳಗಳಲ್ಲಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು, ಮುಂದಿನ ಐದು ದಿನಗಳ ಕಾಲ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.