ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: FDA , SDA ನೇಮಕಾತಿ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ
ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ ನ್ಯೂಸ್ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು (FDA) ಹಾಗೂ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಕೊನೆ ಕ್ಷಣದಲ್ಲಿ ಯಾರಿಗೆಲ್ಲಾ ಅರ್ಜಿ ಸಲ್ಲಿಸಲು ಆಗದೇ ನಿರಾಸೆಯಾಗಿದ್ದವರು ಇದೀಗ ಅರ್ಜಿ ಹಾಕಬಹುದಾಗಿದೆ.

ಬೆಂಗಳೂರು, ನವೆಂಬರ್ 24: 5,431 ಎಸ್ಡಿಎ ಹಾಗೂ ಎಫ್ಡಿಎ ಹುದ್ದೆ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು (FDA) ಹಾಗೂ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನವೆಂಬರ್ 24ರಂದು ಆದೇಶ ಹೊರಡಿಸಿದೆ.
ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಮೊದಲು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಲು ನವೆಂಬರ್ 26 ಕೊನೆಯ ದಿನವಾಗಿತ್ತು. ಆದ್ರೆ, ಹಲವು ಅಭ್ಯರ್ಥಿಗಳು ದಿನಾಂಕ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದರಿಂದ, ಅಭ್ಯರ್ಥಿಗಳ ಹಿತದೃಷ್ಟಿಯಿಂದ ಈಗ ನವೆಂಬರ್ 30ರವರೆಗೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ 5,431 ಸರ್ಕಾರಿ ಹುದ್ದೆಗಳ ನೇಮಕಾತಿ: FDA, SDA ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇನ್ನು ಅರ್ಜಿ ಸಲ್ಲಿಸುವವರು ನವೆಂಬರ್ 30ರೊಳಗೆ ಪರೀಕ್ಷಾ ಶುಲ್ಕವನ್ನೂ ಕಡ್ಡಾಯವಾಗಿ ಪಾವತಿಸಬೇಕು. ಉಳಿದಂತೆ ನೇಮಕಾತಿ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹಾಗೂ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂದೇ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಕೊನೆಯ ಕ್ಷಣದ ಸರ್ವರ್ ಸಮಸ್ಯೆ ಅಥವಾ ತಾಂತ್ರಿಕ ತೊಂದರೆಗಳಿಗೆ ಕಾಯದೆ, ಆಸಕ್ತ ಅಭ್ಯರ್ಥಿಗಳು ಆದಷ್ಟು ಬೇಗ ನವೆಂಬರ್ 30ರೊಳಗೆ ತಮ್ಮ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕೆಇಎ ಸಲಹೆ ನೀಡಿದೆ.
ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿತ್ತು. ಅಕ್ಟೋಬರ್ 30ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅರಂಭವಾಗಿದ್ದು, ನವೆಂಬರ್ 25 ಕೊನೆ ದಿನವಾಗಿತ್ತು. ಅಲ್ಲದೇ ನ.26ರೊಳಗೆ ಶುಲ್ಕ ಪಾವತಿಸಬೇಕು ಎಂದು ಪ್ರಾಧಿಕಾರದ ಅಧಿಸೂಚನೆಯಲ್ಲಿ ತಿಳಿಸಿತ್ತು.ಆದ್ರೆ, ಇದೀಗ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿ ದಿನಾಂಕವನ್ನು ನವೆಂಬರ್ 30ರವರೆಗೆ ಅವಕಾಶ ನೀಡಲಾಗಿದೆ.




