ಅಪಹರಣ ಪ್ರಕರಣ: ಹೆಚ್​ಡಿ ರೇವಣ್ಣ ಜೈಲಿಂದ ಬಿಡುಗಡೆ, ಲಾಠಿಚಾರ್ಜ್

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಈ ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಲಾಗಿತ್ತು ಎಂಬ ಆರೋಪದ ಮೇಲೆ ಮಾಜಿ ಸಚಿವ, ಶಾಸಕ ಹೆಚ್​ಡಿ ರೇವಣ್ಣ ಅವರು ಜೈಲು ಪಾಲಾಗಿದ್ದರು. ಇದೀಗ 11 ದಿನಗಳ ಬಳಿಕ ಸೋಮವಾರ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಹೊರಗಡೆ ಬಂದಿದ್ದಾರೆ.

ಅಪಹರಣ ಪ್ರಕರಣ: ಹೆಚ್​ಡಿ ರೇವಣ್ಣ ಜೈಲಿಂದ ಬಿಡುಗಡೆ, ಲಾಠಿಚಾರ್ಜ್
ಶಾಸಕ ಹೆಚ್​ಡಿ ರೇವಣ್ಣ
Edited By: ವಿವೇಕ ಬಿರಾದಾರ

Updated on: May 14, 2024 | 2:01 PM

ಬೆಂಗಳೂರು, ಮೇ 14: ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆ ಅಪಹಿರಸಿದ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಅವರಿಗೆ ಸೋಮವಾರ (ಮೇ. 13) ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು (ಮೇ 14) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹೆಚ್​ಡಿ ರೇವಣ್ಣ ಅವರು ಮಂಗಳವಾರ ಬಿಡುಗಡೆಯಾಗುತ್ತಾರೆ ಎಂಬ ವಿಚಾರ ತಿಳಿದಿದ್ದ ಅವರ ಬೆಂಬಲಿಗರು ಮತ್ತು ನೂರಾರು ಜೆಡಿಎಸ್​ ಕಾರ್ಯಕರ್ತರು ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು. ಹೆಚ್​ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದರು.

ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಸೋಮವಾರವೇ ​ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಆಗಿದ್ದರಿಂದ ಕೋರ್ಟ್​ ಪ್ರಕ್ರಿಯೆಗಳು ಇಂದಿಗೆ (ಮೇ 14) ಮುಂದೂಡಲಾಗಿತ್ತು. ಹೀಗಾಗಿ ಹೆಚ್​ಡಿ ರೇವಣ್ಣ ಸೋಮವಾರದ ರಾತ್ರಿಯನ್ನು ಜೈಲಿನಲ್ಲೇ ಕಳೆದರು. ಮಂಗಳವಾರ ಕೋರ್ಟ್​​ ಪ್ರಕ್ರಿಯೆಗಳು ಮುಗಿದಿದ್ದು, ಇದೀಗ ಜೈಲಿಂದ ಬಿಡುಗಡೆಯಾಗಿದ್ದಾರೆ.

ಏನಿದು ಕಿಡ್ನಾಪ್ ಕೇಸ್?

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.

ಮಹಿಳೆಯ ಪತ್ತೆಗಾಗಿ ನಂತರ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಸಂತ್ರಸ್ತೆ ಹೆಚ್​ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಬಳಿಕ ಮೇ 03ರ ಸಂಜೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎಸ್​​ಐಟಿ ಮೂರನೇ ನೋಟಿಸ್ ನೀಡಿತ್ತು.

ಎಸ್​ಐಟಿ ನೋಟಿಸ್​ ನೀಡುತ್ತಿದ್ದಂತೆ ಮಾಜಿ ಹೆಚ್​ಡಿ ರೇವಣ್ಣ ವಕೀಲರ ಮೊರೆ ಹೋಗಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಜಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಸಿದ್ದರು. ಆದರೆ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಬಳಿಕ ಎಸ್​ಐಟಿ ಪ್ರಜ್ವಲ್​ ರೇವಣ್ಣ ಅವರನ್ನು ಬಂಧಿಸಿತ್ತು. ಸೋಮವಾರ ಜಾಮೀನು ಅರ್ಜಿ ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೆಚ್​ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

 

Published On - 1:44 pm, Tue, 14 May 24

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us