ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್
ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅಲ್ಲದೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್ಡ್ರೈವ್ನಲ್ಲಿನ ಮಹಿಳೆಯನ್ನು ಅಪರಹರಿಸಿದ್ದ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ಬೆಂಗಳೂರು, ಜೂನ್ 18: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ (Kidnap Case) ಹೈಕೋರ್ಟ್ (High Court) ಭವಾನಿ ರೇವಣ್ಣ (Bhavani Revanna) ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿತು.
ಏನಿದು ಪ್ರಕರಣ?
ಪ್ರಜ್ವಲ್ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಹೆಚ್ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ ವಿಚಾರಣಾಧೀನ ಕೈದಿ ನಂಬರ್ 5664
ಹೆಚ್ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಸದ್ಯ ಹೆಚ್ಡಿ ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್ ಕೊಟ್ಟಿತ್ತು. ನೋಟಿಸ್ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು.
ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:04 am, Tue, 18 June 24