ಫೆಂಗಲ್ ಚಂಡಮಾರುತ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

| Updated By: ರಮೇಶ್ ಬಿ. ಜವಳಗೇರಾ

Updated on: Dec 02, 2024 | 7:43 PM

Cyclone Fengal: ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್‌ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಇನ್ನು ನಾಳೆಯೂ ಸಹ ಮಳೆಯ ಮುನ್ಸೂಚನೆ ಇರುವುದರಿಂದ ಕೊಡಗು, ಕೋಲಾರ, ದಕ್ಷಿಣ ಕನ್ನಡ ಸೇರಿದಂತೆ ಇತರೆ ಹಲವು ಜಿಲ್ಲೆಯಾದ್ಯಂತ ನಾಳೆ(ಡಿಸೆಂಬರ್ 03) ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಫೆಂಗಲ್ ಚಂಡಮಾರುತ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಫೆಂಗಲ್ ಚಂಡಮಾರುತ
Follow us on

ಕೊಡಗು, (ಡಿಸೆಂಬರ್ 2):ಚಳಿಗಾಲದಲ್ಲೂ ಕೂಡ ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆದಿದೆ. ಫೆಂಗಲ್ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಅವಾಂತರಗಳೇ ಸೃಷ್ಟಿಯಾಗಿದ್ದು, ಮುಂಜಾಗ್ರಾತಾ ಕ್ರಮವಾಗಿ ನಾಳೆ(ಡಿಸೆಂಬರ್ 03) ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗು ಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ನಾಳೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ನಾಳೆಯೂ(ಡಿಸೆಂಬರ್ 3) ಸಹ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆಯು ನಾಳೆ ರೆಡ್​ ಘೋಷಣೆ ಮಾಡಿದೆ. ಜಿಲ್ಲಾದ್ಯಂತ ತುಂತುರು ಮಳೆಯಾಗುತ್ತಿದ್ದು, ನಾಳೆಯೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ಶಾಲಾ ಕಾಲೇಜುಗಳಿಗೆ ರಜೆ ನೀಡಿದ್ದಾರೆ.

ಇದನ್ನೂ ಓದಿ: Mangaluru Rains: ಫೆಂಗಲ್ ಚಂಡಮಾರುತದ ಆರ್ಭಟ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ದಕ್ಷಿಣಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ನಾಳೆ ರಜೆ

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಫೆಂಗಲ್ ಚಂಡಮಾರುತ ಆರ್ಭಟ ಜೋರಾಗಿದ್ದು, ಇದು ನಾಳೆಯೂ(ಡಿಸೆಂಬರ್ 03) ಸಹ ಮುಂದುವರಿಯಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ(ಪದವಿಪೂರ್ವ) ನಾಳೆ ರಜೆ ನೀಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ನಿರಂತರ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಕೋಲಾರ ಜಿಲ್ಲೆಯಲ್ಲಿ ನಾಳೆಯೂ ಸಹ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಲು ಸೂಚನೆ ನೀಡಿ ಕೋಲಾರ ಡಿಸಿ ಅಕ್ರಂ ಪಾಷಾ ಆದೇಶಿಸಿದ್ದಾರೆ.

ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಫೆಂಗಲ್ ಚಂಡಮಾರುತದಿಂದ ನಾಳೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಮನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ.

ಮೈಸೂರಿನಲ್ಲೂ ರಜೆ ಘೋಷಣೆ

ಮೈಸೂರು ಜಿಲ್ಲೆಯಲ್ಲಿ ನಾಳೆ (ಡಿ.3) ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ 3/12/2024ರ ಮಂಗಳವಾರ (ನಾಳೆ) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ

ಫೆಂಗಲ್ ಚಂಡಮಾರುತದಿಂದ ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರಿಂದ ನಾಳೆ(ಡಿಸೆಂಬರ್ 03) ಜಿಲ್ಲೆಯಲ್ಲಿ ಶಾಲಾಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಪದವಿ ಕಾಲೇಜಿಗೆ ನಾಳೆ ರಜೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಇನ್ನು ಕಾಫಿನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆ ನೀಡಲಾಗಿದೆ. ಕಾಲೇಜು ಹೊರತುಪಡಿಸಿ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸಹಾಯಕ್ಕಾಗಿ ಕಂಟ್ರೋಲ್ ರೂಂ ನಂಬರ್ ‌08262_238950 ಕರೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಉಡುಪಿ‌ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಹಾಗೇ ಉಡುಪಿ ಜಿಲ್ಲೆಯಲ್ಲೂ ಸಹ ನಾಳೆ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಜಿಲ್ಲೆಯಲ್ಲಿ ಆರೆಂಜ್ ಅಲಾರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್‌ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು(ಡಿಸೆಂಬರ್ 02) ಮೈಸೂರು, ಕೋಲಾರ, ಹಾಸನ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Mon, 2 December 24