ಮಡಿಕೇರಿಯಲ್ಲಿ ಭೀಕರ ಅಪಘಾತ: ಕಾರು-ಲಾರಿ ಮುಖಾಮುಖಿ ಡಿಕ್ಕಿ, ನಾಲ್ವರು ದುರ್ಮರಣ
ಕೊಡಗು ಜಿಲ್ಲೆಯ ದೇವರಕೊಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಲದಲ್ಲೇ ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕೊಡಗು, (ಜುಲೈ 25): ಲಾರಿ (lorry) ಹಾಗೂ ಕಾರಿನ (Car) ನಡುವೆ ಭೀಕರ ಅಪಘಾತ (Accident) ಸಂಭವಿಸಿದ್ದು,ನಾಲ್ವರು ಮೃತಪಟ್ಟಿರುವ ಘಟನೆ ಇಂದು (ಜುಲೈ 25) ಕೊಡಗು (Kodagu) ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಗ್ರಾಮದಲ್ಲಿ ನಡೆದಿದೆ. ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಮೃತ ದುರ್ದೈವಿಗಳು. ಮೃತರು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳು ಎಂದು ತಿಳಿದುಬಂದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಕಾರು ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿತ್ತು. ಕಾರಿನಲ್ಲಿದ್ದ ನಾಲ್ಕು ಮಂದಿ ಗುರುವಾರ ಉಳ್ಳಾಲಕ್ಕೆ ಹೋಗಿ ಹಿಂತಿರುಗುವಾಗ ಎದುಗೆ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳದಲ್ಲಿದ್ದ ಕಾರು ಲಾರಿ ತೆರವುಗೊಳಿಸುತ್ತಿದ್ದಾರೆ.
ವಿದ್ಯಾರ್ಥಿ ಸಾವು
ಹಾವೇರಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ಮೃತ್ಯುಂಜಯ ಶಾಲೆ ಆವರಣದಲ್ಲಿ ನಡೆದಿದೆ. ಮೊಹಮ್ಮದ್ ಶಾ ಗೌಸ್ ರಟ್ಟೀಹಳ್ಳಿ(12) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಕ್ಕಳನ್ನು ಮಧ್ಯಾಹ್ನದ ಊಟಕ್ಕೆ ಬಿಟ್ಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
Published On - 3:32 pm, Fri, 25 July 25



