ಕೋಲಾರದಲ್ಲಿ ವೈರಲ್ ಫೀವರ್: ಹೆಚ್1ಎನ್1 ಸೋಂಕು ಹೆಚ್ಚಳ; ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಶನ್ ವಾರ್ಡ್
Kolar H1N1 Outbreak: ಕೋಲಾರದಲ್ಲಿ ವೈರಲ್ ಜ್ವರ ಮತ್ತು H1N1 ಸೋಂಕುಗಳು ಹೆಚ್ಚಾಗುತ್ತಿವೆ. ಕಳೆದ ಆರು ತಿಂಗಳಲ್ಲಿ 16 H1N1 ಪ್ರಕರಣಗಳು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಶನ್ ವಾರ್ಡ್‌ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಕೈಗಳನ್ನು ಆಗಾಗ ತೊಳೆಯುವುದು, ವೈಯಕ್ತಿಕ ನೈರ್ಮಲ್ಯ ಕಾಪಾಡುವುದು, ಮತ್ತು ಜ್ವರ ಬಂದ ತಕ್ಷಣ ವೈದ್ಯರ ಸಲಹೆ ಪಡೆಯುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.

ಕೋಲಾರ, ಆಗಸ್ಟ್ 29: ಕೋಲಾರ (kolar) ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ವೈರಲ್ ಫೀವರ್ ಹಾಗೂ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಕಳೆದ ಆರು ತಿಂಗಳ ಅವಧಿಯಲ್ಲಿ ಒಟ್ಟು 2,010 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ 56 ತೀವ್ರ ಉಸಿರಾಟದ ಸೋಂಕು ಪ್ರಕರಣಗಳು ಹಾಗೂ 16 ಹೆಚ್1ಎನ್1 (H1N1) ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಆರೋಗ್ಯ ಇಲಾಖೆಯು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಐಸೋಲೇಶನ್ ವಾರ್ಡ್‌ಗಳನ್ನು ತೆರೆಯಲು ಮುಂದಾಗಿದೆ.
ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ: ಔಷಧಗಳ ದಾಸ್ತಾನು
ಸೋಂಕಿತರಿಗೆ ತ್ವರಿತ ಚಿಕಿತ್ಸೆ ನೀಡುವ ಉದ್ದೇಶದಿಂದ ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಐಸೋಲೇಶನ್ ವಾರ್ಡ್‌ಗಳು, ರ‍್ಯಾಪಿಡ್ ರೆಸ್ಪಾನ್ಸ್ ಬೆಡ್‌ಗಳು ಹಾಗೂ 12 ಬೆಡ್‌ಗಳ ವಿಶೇಷ ವಾರ್ಡ್ ಅನ್ನು ಸಜ್ಜುಗೊಳಿಸಲಾಗಿದೆ. ವಾರ್ಡ್‌ಗಳ ವ್ಯವಸ್ಥೆಯನ್ನು ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್ ಖುದ್ದು ಪರಿಶೀಲನೆ ಮಾಡಿದ್ದಾರೆ. ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ರೀತಿಯ ಔಷಧಿಗಳು ಹಾಗೂ ವಿಶೇಷವಾಗಿ ‘ಓಸೆಲ್ಟಾಮಿವಿರ್’ ಮಾತ್ರೆಗಳನ್ನು ಆಸ್ಪತ್ರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ: ಜಿಲ್ಲಾ ಶಸ್ತ್ರಚಿಕಿತ್ಸಕರ ಕಿವಿಮಾತು
ಇನ್ನು ಜಿಲ್ಲೆಯಲ್ಲಿ ಸದ್ಯ ಆತಂಕಪಡುವಂತಹ ಪರಿಸ್ಥಿತಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶರೀಫ್, ‘ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಸಲಹೆ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜ್ವರದ ನಿಯಂತ್ರಣ ಮತ್ತು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.
ಸೋಂಕಿನಿಂದ ರಕ್ಷಣೆ ಹೇಗೆ?
‘ಮನೆಯಲ್ಲಿ ಯಾರಿಗಾದರೂ ಜ್ವರ ಕಾಣಿಸಿಕೊಂಡರೆ ತಕ್ಷಣ ಸ್ವಯಂ ಪ್ರತ್ಯೇಕವಾಗಿರಬೇಕು, ಆಗಾಗ ಕೈಗಳನ್ನು ತೊಳೆಯುವುದು, ವೈಯಕ್ತಿಕ ನೈರ್ಮಲ್ಯ ಕಾಪಾಡುವುದು ಹಾಗೂ ಸಾಕಷ್ಟು ನೀರು, ಹಣ್ಣಿನ ರಸ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು’ ಎಂದು ತಿಳಿಸಿದ್ದಾರೆ. ‘ಜ್ವರ ಬಂದಾಗ ಸ್ವಯಂ ಚಿಕಿತ್ಸೆ ಅಥವಾ ಮಾತ್ರೆಗಳನ್ನು ತೆಗೆದುಕೊಳ್ಳದೆ, ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಅಥವಾ ಎಸ್‌ಎನ್‌ಆರ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುವಂತೆ’ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಹೆಚ್1ಎನ್1 ಭೀತಿ: ಕಿಮ್ಸ್ನಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ; ಆತಂಕ ಬೇಡ ಎಂದ ವೈದ್ಯರು
ಒಟ್ಟಾರೆಯಾಗಿ ವೈರಲ್ ಜ್ವರ ಹಾಗೂ ಹೆಚ್1ಎನ್1 ಸೋಂಕು ಹರಡದಂತೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ಜ್ವರ ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




