ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು: ಸಚಿವ ಶಿವರಾಜ ತಂಗಡಗಿ

| Updated By: Ganapathi Sharma

Updated on: Mar 25, 2024 | 9:21 AM

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಹಾಗೆಯೇ ರಾಜಕಾರಣಿಗಳ ವಿವಾದಾತ್ಮಕ ಹೇಳಿಕೆಗಳೂ ಸುದ್ದಿಯಾಗುತ್ತಿವೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಂದೆ ಓದಿ.

ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು: ಸಚಿವ ಶಿವರಾಜ ತಂಗಡಗಿ
ಶಿವರಾಜ ತಂಗಡಗಿ
Follow us on

ಕೊಪ್ಪಳ, ಮಾರ್ಚ್​ 25: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ (Shivaraj Tangadagi) ಕೊಪ್ಪಳದ ಕಾರಟಗಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾನುವಾರ ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ (Congress) ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದಿದ್ದಾರೆ. ಮೋದಿ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿತ್ತು. ಆದರೆ, ಉದ್ಯೋಗ ಕೊಡಿ ಎಂದರೆ ಪಕೋಡ ಮಾರಿ ಎನ್ನುತ್ತಾರೆ ಮೋದಿ. ಹತ್ತು ವರ್ಷದಲ್ಲಿ ಇಪ್ಪತ್ತು ಕೋಟಿ ಯುವಕರಿಗೆ ಉದ್ಯೋಗ ಸಿಗಬೇಕಿತ್ತು. ಆದರೆ ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀಡಿದ ಭರವಸೆಯಂತೆ ಉದ್ಯೋಗ ಸೃಷ್ಟಿ ಮಾಡದ ಕಾರಣ ಇನ್ನು ವಿದ್ಯಾರ್ಥಿಗಳು ಮತ್ತು ಯುವಕರು ‘ಮೋದಿ ಮೋದಿ’ ಎಂದು ಕೂಗಿದರೆ ಅವರ ಕಪಾಳಕ್ಕೆ ಹೊಡೆಬೇಕು ಎಂದು ಸಚಿವರು ಹೇಳಿದ್ದಾರೆ.

ಅಭಿವೃದ್ಧಿ ಕೆಲಸ ಮಾಡದ ಕೇಂದ್ರ ಸರ್ಕಾರ: ತಂಗಡಗಿ

ಲೋಕಸಭೆ ಚುನಾವಣೆ ಬಂದಿದೆ. ಮತ್ತೆ ಬಿಜೆಪಿಯವರು ಸುಳ್ಳು ಹೇಳಿಕೊಂಡು ಮತ ಕೇಳಲು ಬರುತ್ತಿದ್ದಾರೆ. ಅವರಿಗೆ ಮತ ಕೇಳಲು ನಾಚಿಕೆ ಆಗಬೇಕು. ನಮ್ಮ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದರೆ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿ, ಯುವಕರಿಗೆ ಉದ್ಯೋಗ ನೀಡುವುದಾಗಿ ಮೋದಿ ಹೇಳಿದ್ದರು. ಆದರೆ, ಯುವಕರಿಗೆ ಉದ್ಯೋಗ ನೀಡಿಲ್ಲ ಎಂದು ತಂಗಡಗಿ ಹೇಳಿದ್ದಾರೆ.

ನುಡಿದಂತೆ ನಡೆದಿದೆ ನಮ್ಮ ಸರ್ಕಾರ: ತಂಗಡಗಿ

ಕರ್ನಾಟಕದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ನಾವು ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದ್ದೆವು. ಅದೇ ರೀತಿ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ತಂಗಡಗಿ ಹೇಳಿದ್ದಾರೆ.

ಇದನ್ನೂ ಓದಿ: ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಮಿಸ್ ಆಗಲು ಕಾರಣ ಇಲ್ಲಿದೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರ ಹೇಳಿಕೆಗಳು, ಆರೋಪ-ಪ್ರತ್ಯಾರೋಪಗಳು ಬಿರುಸಾಗಿವೆ. ಈ ಮಧ್ಯೆ, ಪ್ರಧಾನಿ ಮೋದಿ ಬಗ್ಗೆ ತಂಗಡಗಿ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕರಿಂದ ಆಕ್ಷೇಪಗಳು ವ್ಯಕ್ತವಾಗಲು ಆರಂಭವಾಗಿದೆ. ಈ ಹಿಂದೆ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ಬಗ್ಗೆ ಏಕವಚನ ಬಳಸಿ ನಿಂದಿಸಿದ್ದು ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ತಂಗಡಗಿ ಹೇಳಿಕೆ ವಿವಾದ ಸೃಷ್ಟಿಸುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 am, Mon, 25 March 24