
ಕೊಪ್ಪಳ, ನವೆಂಬರ್ 25: ಡಿಸೆಂಬರ್ 2ರಿಂದ 11ರ ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಕರ್ನಾಟಕ ವಿಧಾನಮಂಡಲ ಚಳಿಗಾಲದ ಅಧಿವೇಶನದ ನಡುವೆಯೇ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಡಿ.10ರಂದು ಬೆಳಗಾವಿಯಲ್ಲಿ 1 ದಿನದ ಉಪವಾಸ ಸತ್ಯಾಗ್ರಹಕ್ಕೆ ಬಸವಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಹೋರಾಟದ ವೇಳೆ 2024ರಲ್ಲಿ ನಡೆದಿದ್ದ ಲಾಠಿಚಾರ್ಜ್ ಘಟನೆ ಖಂಡಿಸಿ, ಡಿ.10ನ್ನು ಲಿಂಗಾಯತರ ಮೇಲಿನ ದೌರ್ಜನ್ಯ ದಿನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.
ಉಪವಾಸ ಸತ್ಯಾಗ್ರಹಕ್ಕೆ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಇದ್ದು, ಅಧಿವೇಶನದಲ್ಲಿ ಧ್ವನಿ ಎತ್ತಲು ಸಮಾಜದ ಶಾಸಕರನ್ನು ಬಸವಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಆಡಳಿತ ಮತ್ತು ವಿಪಕ್ಷದ ಶಾಸಕರು ಸಮಾಜದ ಪರ ನಿಲ್ಲಬೇಕು. ಎಲ್ಲಾ ಪೀಠಗಳ ಸ್ವಾಮೀಜಿಗಳನ್ನು ಹೋರಾಟಕ್ಕೆ ಆಹ್ವಾನಿಸಿರುವೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹಾಗೂ ಎಲ್ಲ ಲಿಂಗಾಯತರಿಗೆ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸ್ಥಾನ ನೀಡ್ಬೇಕು. ರಾಜಕೀಯ ಪಕ್ಷಗಳು ಯಾವುದೇ ಇರಲಿ, ಮೀಸಲಾತಿ ಹೋರಾಟ ನಿರಂತರ ಎಂದು ಸ್ವಾಮೀಜಿ ಹೇಳಿದ್ದಾರೆ.
ಇದನ್ನೂ ಓದಿ: ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ರದ್ದುಗೊಳಿಸಿ ಹೈಕೋರ್ಟ್ ಆದೇಶ
‘3ಬಿ’ ಪ್ರವರ್ಗದ ಅಡಿಯಲ್ಲಿ ಶೇ. 5ರಷ್ಟು ಮೀಸಲಾತಿ ಪಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು, ಶೇ. 15ರಷ್ಟು ಮೀಸಲಾತಿ ಇರುವ ‘2ಎ’ ಪ್ರವರ್ಗಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಪಂಚಮಸಾಲಿ ಸಮುದಾಯ ಹೋರಾಟ ನಡೆಸಿತ್ತು. ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ, ಹೋರಾಟಗಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರ ಆದೇಶದ ಮೇರೆಗೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದರು. ಈ ವೇಳೆ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:27 pm, Wed, 25 November 26