
ಬೆಂಗಳೂರು, ನವೆಂಬರ್ 21: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಾಧಿಕಾರಿಗಳ ನೇಮಕ ಹಗರಣ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳಾದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಆಯೋಗದ ಸದಸ್ಯೆ ಬಿ.ವಿ. ಗೀತಾ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಇಬ್ಬರನ್ನೂ ಪ್ರತ್ಯೇಕವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
400 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದ ಆರೋಪ
ರಾಜ್ಯದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 8 ಮತ್ತು 9ರಂದು ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಮತ್ತು ಉತ್ತರ ಕೀ ಸೋರಿಕೆ, ಅಭ್ಯರ್ಥಿಗಳಿಂದ ಹಣ ವಸೂಲಿ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.
ಜಾರಿ ನಿರ್ದೇಶನಾಲಯದ (ED) ತನಿಖೆಯ ಪ್ರಕಾರ, ಕೆಲವು ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನವೇ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನು ಒದಗಿಸಲಾಗಿದೆ. ಇದಕ್ಕಾಗಿ ಅಭ್ಯರ್ಥಿಗಳಿಂದ ತಲಾ 20 ಲಕ್ಷದಿಂದ 40 ಲಕ್ಷ ರೂಪಾಯಿವರೆಗೆ ಹಣ ಪಡೆಯಲಾಗಿದೆ ಎಂಬ ಆರೋಪವಿದೆ.
ಇದನ್ನೂ ಓದಿ:
ಕೆಪಿಎಸ್‌ಸಿ ನೇಮಕಾತಿ ಹಗರಣದಲ್ಲಿ ಇಡಿ ತನಿಖೆಯ ಸ್ಫೋಟಕ ಅಂಶ ಬಯಲು: ಅಭ್ಯರ್ಥಿಗಳ ಸಂದರ್ಶನ ಹೇಗೆ ನಡೆಯುತ್ತಿತ್ತು ಗೊತ್ತಾ?
ಸಿಐಡಿ ತನಿಖೆಯಿಂದ ಎಸ್‌ಐಟಿಗೆ ಪ್ರಕರಣ
ಆರಂಭದಲ್ಲಿ ಈ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿತ್ತು. ಬಳಿಕ ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ಪ್ರಕರಣದ ತನಿಖೆಯನ್ನು ಸ್ವತಂತ್ರವಾಗಿ ಮುಂದುವರಿಸಲು ಎಸ್‌ಐಟಿಗೆ ಜವಾಬ್ದಾರಿ ನೀಡಲಾಗಿದೆ.
ಈ ಪ್ರಕರಣದಲ್ಲಿ ಮಾಜಿ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಮಧ್ಯವರ್ತಿ ಬಸವರಾಜ್ ಕನ್ನಾಳೆ ಸೇರಿದಂತೆ ಹಲವರ ವಿರುದ್ಧವೂ ತನಿಖೆ ನಡೆಯುತ್ತಿದೆ.
ಇದೀಗ ಶಿವಶಂಕರಪ್ಪ ಸಾಹುಕಾರ್ ಮತ್ತು ಬಿ.ವಿ. ಗೀತಾ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವುದು ಪ್ರಕರಣದ ತನಿಖೆಯಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಆರೋಪಗಳ ಕುರಿತು ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರು ಯಾರು ಎಂಬುದು ನ್ಯಾಯಾಲಯದ ವಿಚಾರಣೆ ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ನಿರ್ಧಾರವಾಗಲಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ