ಬೆಂಗಳೂರು, ಸೆಪ್ಟೆಂಬರ್ 25: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಸಾರಿಗೆ ಮುಷ್ಕರಕ್ಕೆ ಸಿದ್ಧರಾಗಲು ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಕರೆ ನೀಡಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ತಿಂಗಳ 26 ರ ವರೆಗೆ ಗಡುವು ನೀಡಲಾಗಿದೆ. ಈ ತಿಂಗಳ 26 ರೊಳಗೆ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ, 27 ರಂದು ಸಭೆ ನಡೆಸಿ ಮುಷ್ಕರದ ದಿನಾಂಕ ಘೋಷಣೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತಾನಾಡಿದ ಅನಂತ ಸುಬ್ಬರಾವ್, 27 ರಂದು ಸಭೆ ಮಾಡಿ ಮುಷ್ಕರ ದಿನಾಂಕ ಘೋಷಣೆ ಮಾಡುತ್ತೇವೆ ಎಂದಿದ್ದಾರೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳಲ್ಲಿ ಒಟ್ಟು 23,978 ಬಸ್ಸುಗಳಿದ್ದು, ಇವುಗಳಲ್ಲಿ 1,04,450 ನೌಕರರಿದ್ದಾರೆ. ಈಗಾಗಲೇ ಸಾರಿಗೆ ನೌಕರರು 2020 ರ ಡಿಸೆಂಬರ್ – 10 ರಿಂದ 14 ರ ವರೆಗೆ 5 ದಿನಗಳ ಕಾಲ ಮತ್ತು 2021 ರಲ್ಲಿ ಏಪ್ರಿಲ್- 7 ರಿಂದ 21 ರ ವರೆಗೆ 17 ದಿನಗಳ ಮುಷ್ಕರ ಮಾಡಿ ಅಂದಿನ ಬಿಜೆಪಿ ಸರ್ಕಾರಕ್ಕೆ ಸರಿಯಾಗಿ ಬಿಸಿ ಮುಟ್ಟಿಸಿದ್ದರು. ಇದೀಗ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ಧರಾಗಲು ಕರೆ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಾರಿಗೆ ಮುಖಂಡರ ಜೊತೆಗೆ ಮಾತಾನಾಡಿ ಸಮಸ್ಯೆ ಬಗಹರಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿಂದು ವಿಚಾರಣೆ, ಸಿದ್ದರಾಮಯ್ಯಗಿದೆ ಸಾಲು ಸಂಕಷ್ಟ
ಒಟ್ಟಿನಲ್ಲಿ ಈಗಾಗಲೇ ಸಾರಿಗೆ ಮುಖಂಡರು 26 ರವರೆಗೆ ಸರ್ಕಾರಕ್ಕೆ ಬೇಡಿಕೆ ಈಡೇರಿಸಲು ಗಡುವು ನೀಡಿದ್ದು, ಒಂದು ವೇಳೆ 26 ರೊಳಗೆ ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ 27 ರಂದು ಮುಷ್ಕರದ ದಿನಾಂಕ ಘೋಷಣೆ ಮಾಡುತ್ತೇವೆ ಎಂದಿದ್ದಾರೆ. ಈ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ