ಬೆಂಗಳೂರು, ಜನವರಿ 06: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರ ಬಹುದಿನಗಳ ಕನಸು ನನಸಾಗಿದೆ. ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ (ಆರೋಗ್ಯ ಕಾರ್ಡ್)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು. ಸರ್ಕಾರಿ ಒಡೆತನದ ಸಾರಿಗೆ ಸಂಸ್ಥೆಗಳ ಪೈಕಿ ಮೊದಲನೆಯ ರಾಜ್ಯ ಎನ್ನುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಕರ್ನಾಟಕ ಸರ್ಕಾರ ರಾಜ್ಯದ ಖಾಸಗಿ ಮತ್ತು ಆಯುರ್ವೇದಿಕ್ ಸೇರಿದಂತೆ 250ಕ್ಕೂ ಹೆಚ್ಚು ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಂಡಿದೆ. ಈ ಒಡಂಬಡಿಕೆಯಂತೆ ಕೆಎಸ್ಆರ್ಟಿಸಿ ನೌಕರರು, ಕಾರ್ಮಿಕರು ಈ ಆಸ್ಪತ್ರೆಗಳಲ್ಲಿ ನಗದು ಇಲ್ಲದೆ ಚಿಕಿತ್ಸೆ ಪಡೆಯಬಹುದಾಗಿದೆ. ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಸಾಮಾನ್ಯ ಆಸ್ಪತ್ರೆಯಲ್ಲೂ ಕೆಎಸ್ಆರ್ಟಿಸಿ ನೌಕರರು, ಸಿಬ್ಬಂದಿಗೆ ನಗದು ರಹಿತ ಚಿಕಿತ್ಸೆ ದೊರೆಯಲಿದೆ.
ಇದನ್ನೂ ಓದಿ: ಕೆಎಸ್ಆರ್ಟಿಸಿ ಬಸ್ನಲ್ಲಿನ್ನು ಚಿಲ್ಲರೆ ಚಿಂತೆ ಬೇಡ: ಎಲ್ಲ ಬಸ್ಗಳಿಗೂ ವಿಸ್ತರಣೆಯಾಯ್ತು ಕ್ಯುಆರ್ ಕೋಡ್ ಟಿಕೆಟ್
ಆರೋಗ್ಯ ಕಾರ್ಡ್ ಮೂಲಕ ಸಿಬ್ಬಂದಿಯ ಕುಟುಂಬದ ಸದಸ್ಯರು (ಪತಿ, ಪತ್ನಿ, ಮಕ್ಕಳು, ತಂದೆ, ತಾಯಿ) ಈ ಸೌಲಭ್ಯವನ್ನು ಪಡೆಯಬಹುದು. ಒಟ್ಟಾರೆಯಾಗಿ, ಕುಟುಂಬದ ಆರು ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಕೆಎಸ್ಆರ್ಟಿಸಿ ಆರೋಗ್ಯ ಕಾರ್ಡ್ಗಾಗಿ ನೌಕರರು ಪ್ರತಿ ತಿಂಗಳು 650 ರೂಪಾಯಿ ಪಾವತಿ ಮಾಡಬೇಕು. ಕೆಎಸ್ಆರ್ಟಿಸಿ ನಿಗಮ 600 ರೂಪಾಯಿ ಪಾವತಿ ಮಾಡುತ್ತದೆ. ಇದರಿಂದ ವರ್ಷಕ್ಕೆ ಒಟ್ಟು 46 ಕೋಟಿ ರೂಪಾಯಿ ಸಂಗ್ರಹವಾಗುತ್ತದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:06 pm, Mon, 6 January 25