ಈ ಹಿಂದಿನ ಬಿಜೆಪಿ ಸರ್ಕಾರದ ತೀರ್ಮಾನದಂತೆ ಜಿಂದಾಲ್​ಗೆ ಭೂಮಿ ನೀಡಲಾಗಿದೆ: ಎಂಬಿ ಪಾಟೀಲ್ ಸ್ಪಷ್ಟನೆ

ಮುಡಾ ಸೈಟ್ ಸದ್ದು ಮಾಡುತ್ತಿರುವ ಹೊತ್ತಲ್ಲೇ, ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಮಾರಾಟ ಮಾಡಲು ತೆಗೆದುಕೊಂಡಿರುವ ನಿರ್ಧಾರ ಗುದ್ದಾಟಕ್ಕೆ ಕಾರಣವಾಗಿದೆ. ಇದೀಗ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಈ ಹಿಂದಿನ ಬಿಜೆಪಿ ಸರ್ಕಾರದ ತೀರ್ಮಾನದಂತೆ ಜಿಂದಾಲ್​ಗೆ ಭೂಮಿ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರದ ತೀರ್ಮಾನದಂತೆ ಜಿಂದಾಲ್​ಗೆ ಭೂಮಿ ನೀಡಲಾಗಿದೆ: ಎಂಬಿ ಪಾಟೀಲ್ ಸ್ಪಷ್ಟನೆ
ಈ ಹಿಂದಿನ ಬಿಜೆಪಿ ಸರ್ಕಾರದ ತೀರ್ಮಾನದಂತೆ ಜಿಂದಾಲ್​ಗೆ ಭೂಮಿ ನೀಡಲಾಗಿದೆ: ಎಂಬಿ ಪಾಟೀಲ್ ಸ್ಪಷ್ಟನೆ
Edited By:

Updated on: Aug 25, 2024 | 6:19 PM

ಬೆಂಗಳೂರು, ಆಗಸ್ಟ್​ 25: ಜಿಂದಾಲ್ ಕಂಪನಿಗೆ ನೀಡಿದ ಭೂಮಿಯನ್ನು ಬಿಜೆಪಿ ಸರ್ಕಾರದ ತೀರ್ಮಾನದ ಪ್ರಕಾರ ಜಾರಿ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ (MB Patil)​ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಬಿಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿತ್ತು. ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

ಅರವಿಂದ ಬೆಲ್ಲದ ಆರೋಪ ನಿರಾಧಾರ

ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ (2024ರ ಮಾ.12) ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ಈ ವಿಷಯದಲ್ಲಿ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಅವರ ಆರೋಪ ನಿರಾಧಾರ ಎಂದಿದ್ದಾರೆ.

ಇದನ್ನೂ ಓದಿ: ಕೆಐಎಡಿಬಿ ನಿವೇಶನ ಅಕ್ರಮ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಚಿವ ಎಂಬಿ ಪಾಟೀಲ್

ಒಂದು ವೇಳೆ ಒಳ ಒಪ್ಪಂದ ಆಗಿದ್ದರೆ ಅದು ಅವರದ್ದೇ ಪಕ್ಷದ ಸರ್ಕಾರದ ಜತೆ ಆಗಿರಬೇಕು. ಯಡಿಯೂರಪ್ಪ ಸರ್ಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್​ಗೆ ಹೋಯಿತು. ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ. ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ 90 ಸಾವಿರ‌ ಕೋಟಿ ರೂ. ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ, ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆ. ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ಕೊಟ್ಟಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ. ಹಿಂದಿನ ಬಿಜೆಪಿ ಸರಕಾರವು ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ಭಾರಿ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂ ಇತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಬೆನ್ನಲ್ಲೇ ಸಚಿವ ಎಂಬಿ ಪಾಟೀಲ್‌ ವಿರುದ್ಧ ರಾಜ್ಯಪಾಲರಿಗೆ ದೂರು, ಏನಿದು ಪ್ರಕರಣ?

ಇದರಲ್ಲಿ 137 ಕೋಟಿ ರೂಪಾಯಿ ಮೇಲ್ನೋಟಕ್ಕೇ ನಷ್ಟವಾಗಿದೆ. ಈ ಹಣ ಇಲ್ಲಿಯವರೆಗೂ ಕೆಐಎಡಿಬಿಗೂ ಸಂದಾಯವಾಗಿಲ್ಲ. ಇದರ ಬಗ್ಗೆ ಬೆಲ್ಲದ್ ಅವರ ಜಾಣಮೌನ ಯಾಕೆ ಎಂದು ಎಂಬಿ ಪಾಟೀಲ್ ಪ್ರಶ್ನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us