ರಾಯಚೂರು: ಕೊರೊನಾ ಸೋಂಕಿತರಿಗೆ ಉತ್ತಮ ಆರೋಗ್ಯ ಚಿಕಿತ್ಸೆ ಹಾಗೂ ವೈದ್ಯಕೀಯ ಸೇವೆ ಬಲ ಪಡಿಸುವ ನಿಟ್ಟಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ನೇಮಕ ಮಾಡಿಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿಗಳು, ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ನಿನ್ನೆ (ಏಪ್ರಿಲ್ 30) ಕೊರೊನಾ ನಿಯಂತ್ರಣ ಕ್ರಮಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಬಳಿಕ ಈ ವಿಷಯ ತಿಳಿಸಿದ್ದಾರೆ.
ದಿನದಿಂದ ದಿನಕ್ಕೆ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಂಕಿತರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ವೈದ್ಯಕೀಯ ಕ್ಷೇತ್ರ ಬಲಪಡಿಸುವುದು ಅವಶ್ಯಕವಾಗಿದೆ. ಪ್ರಸಕ್ತ ವರ್ಷ ಎಂಬಿಬಿಎಸ್ ತೇರ್ಗಡೆಯಾದ ವಿದ್ಯಾರ್ಥಿಗಳು ಸೇರಿದಂತೆ ವೈದ್ಯರ ನೇಮಕಾತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದ್ದು, ಅತಿ ಶೀಘ್ರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಜಿಲ್ಲೆಯ ಕೊರೊನಾ ಪರಿಸ್ಥಿತಿಗಳ ಬಗ್ಗೆ ತಿಳಿದುಕೊಳ್ಳಲು ಜನಪ್ರತಿನಿಧಿಗಳು ಹಾಗೂ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 551 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 161 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಹೋಮ್ ಐಸೋಲೇಶನ್ನಲ್ಲಿದ್ದಾರೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ 763 ಬೆಡ್, ಖಾಸಗಿ ಆಸ್ಪತ್ರೆಗಳಲ್ಲಿ 807 ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರಥಮ ಹಂತದಲ್ಲಿ ಜಿಲ್ಲೆಯಲ್ಲಿ 16,737 ಜನರು, ಎರಡನೇ ಹಂತದಲ್ಲಿ 10,404 ಜನರು ಚುಚ್ಚುಮದ್ದು ಪಡೆದಿದ್ದು, ತೀರ್ವತೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒಂದು ಕೋಟಿ ಚುಚ್ಚುಮದ್ದು ಬರಲಿವೆ ಎಂದು ಹೇಳಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಜಾರಿಗೆ ತಂದಿದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಕೊರೊನಾ ಸರಪಳಿ ತಡೆಯಲು ಜನರು ಸರ್ಕಾರದ ಮಾರ್ಗಸೂಚಿ ಪಾಲಿಸಲು ಸಹಕರಿಸಬೇಕು ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ಇಲ್ಲಿಯವರೆಗೆ ಕಂಡುಬಂದಿಲ್ಲ. ಮುಂಜಾಗ್ರತೆಯ ಕ್ರಮವಾಗಿ ಮುಖ್ಯಮಂತ್ರಿಗಳ ವಿಡಿಯೋ ಸಂವಾದದಲ್ಲಿ ಜಿಲ್ಲೆಗೆ ಹೆಚ್ಚುವರಿ ಆಮ್ಲಜನಕ ಹಾಗೂ ಚುಚ್ಚುಮದ್ದು ಒದಗಿಸುವ ನಿಟ್ಟಿನ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿತರಿಗೆ ತಪ್ಪು ಕಲ್ಪನೆ ಬಂದಿದೆ. ವೈದ್ಯರ ಸಲಹೆ ಪಡೆದು ಚುಚ್ಚುಮದ್ದು ಪಡೆಯಬೇಕು. 5,800 ಚುಚ್ಚುಮದ್ದು ಜಿಲ್ಲೆಗೆ ಬಂದಿದೆ. ಈ ಪ್ರಮಾಣ ಹೆಚ್ಚಿಸಲು ಜನಪ್ರತಿನಿಧಿಗಳು ಮನವಿ ಮಾಡಿದ್ದಾರೆ. ಕೊರತೆ ಇರುವಲ್ಲಿ ಆ್ಯಂಬುಲೆನ್ಸ್ ನೇರವಾಗಿ ಖರೀದಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಜನರು ಸರ್ಕಾರದ ಮಾರ್ಗಸೂಚಿ ಪಾಲನೆ ಕಟ್ಟುನಿಟ್ಟಾಗಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಡಾ.ಶಿವರಾಜ ಪಾಟೀಲ, ಶಿವನಗೌಡ ನಾಯಕ, ದದ್ದಲ್ ಬಸವನಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ
ಕೊವಿಡ್ ಮಾರ್ಗಸೂಚಿಗಳ ಜಾರಿಗೊಳಿಸುವುದು ಈ ವರ್ಷ ಕಷ್ಟ ಕಷ್ಟವಾಗಿದೆ: ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್
(Laxman Savadi says medical students are being recruited for Corona Emergency at raichur)
Published On - 11:29 am, Sat, 1 May 21