ರಾಜ್ಯದಲ್ಲಿ ಅತಿ ಹೆಚ್ಚು ಮತ್ತು ಕಡಿಮೆ ಮತಗಳ ಅಂತರದಿಂದ ಗೆದ್ದವರು ಯಾರ್ಯಾರು? ಇಲ್ಲಿದೆ ಮಾಹಿತಿ
ಲೋಕಸಭೆ ಚುನಾವಣೆಗೆ ತೆರೆ ಬಿದ್ದಿದೆ. ಮಂಗಳವಾರ (ಜೂ.04) ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಡಿಮೆ ಮತಗಳ ಅಂತರದಿಂದ ಗೆದ್ದರೆ, ಇನ್ನು ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ದಾಖಲೆಯ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ...
ಬೆಂಗಳೂರು, ಜೂನ್ 05: ಸುದೀರ್ಘ ಎರಡು ತಿಂಗಳುಗಳ ಕಾಲ ನಡೆದ ಲೋಕಸಭೆ ಚುನಾವಣೆಗೆ (Lok Sabha Election) ತೆರೆ ಬಿದ್ದಿದೆ. ಮಂಗಳವಾರ (ಜೂ.04) ಲೋಕಸಭೆ ಚುನಾವಣೆಯ ಫಲಿತಾಂಶ (Lok Sabha Election Result) ಪ್ರಕಟವಾಗಿದೆ. ರಾಜ್ಯದಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕರ್ನಾಟಕದ ಕೆಲುವು ಕ್ಷೇತ್ರಗಳಲ್ಲಿ ಅಚ್ಚರಿ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದ ಏಳು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬೇರೆ ಏಳು ಕ್ಷೇತ್ರಗಳಲ್ಲಿ ಎರಡು ಲಕ್ಷ ಮತಗಳ ಅಂತರದಿಂದ ಸೋಲುಂಡಿದ್ದಾರೆ.
ಕಡಿಮೆ ಮತಗಳ ಅಂತರದಿಂದ ಗೆದ್ದವರು, ಸೋತವರು
ದಾವಣಗೆರೆ ಲೋಕಸಭಾ ಕ್ಷೇತ್ರ ಎರಡು ಕುಟುಂಬಗಳ ನಡುವಿನ ಜಿದ್ದಾಜಿದ್ದಿ ಹೋರಾಟಕ್ಕೆ ಸಾಕ್ಷಿಯಾಯಿತು. ಶಾಮನೂರು ಕುಟುಂಬದ ಸೊಸೆ, ದಾವಣಗೆರೆಯಲ್ಲಿ ಗಣಿ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ, ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರು ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಅವರನ್ನು 26,094 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ತವರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ಗೆ ಗೆಲುವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಕಲುಬುರ್ಗಿಯಲ್ಲಿ ಹಾಲಿ ಸಂಸದ ಉಮೇಶ್ ಜಾಧವ್ ಅವರನ್ನು 27,205 ಮತಗಳಿಂದ ಸೋಲಿಸಿದರು.
ಬೆಂಗಳೂರು ಸೆಂಟ್ರಲ್ನಿಂದ ಮೂರು ಬಾರಿ ಸಂಸದರಾಗಿದ್ದ ಪಿಸಿ ಮೋಹನ್ ಅವರು ತಮ್ಮ ಎದುರಾಳಿ ಕಾಂಗ್ರೆಸ್ನ ಮನ್ಸೂರ್ ಅಲಿ ಖಾನ್ ಅವರನ್ನು ಹೆಚ್ಚಿನ ಮತ ಎಣಿಕೆಯಲ್ಲಿ ಹಿಮ್ಮೆಟ್ಟಿಸಿದರು. ಪಿಸಿ ಮೋಹನ್ 32,707 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಮೊಮ್ಮಗ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶ್ರೇಯಸ್ ಪಟೇಲ್ 42,649 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ವಿರುದ್ಧ 43,513 ಮತಗಳ ಅಂತರದಿಂದ ಗೆದ್ದಿದ್ದಾರೆ.
ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರು ಬಿಜೆಪಿಯ ಬಸವರಾಜ ಕೆ.ಶರಣಪ್ಪ ಅವರನ್ನು 46,357 ಮತಗಳಿಂದ ಸೋಲಿಸಿದ್ದಾರೆ. ಮಾಜಿ ಸಚಿವ ಗೋವಿಂದ ಎಂ.ಕಾರಜೋಳ ಅವರು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಬಿ.ಎನ್.ಚಂದ್ರಪ್ಪ ಅವರ ವಿರುದ್ಧ 48,121 ಮತಗಳಿಂದ ಗೆದ್ದಿದ್ದಾರೆ.
ಹೆಚ್ಚು ಮತಗಳ ಅಂತರದಿಂದ ಗೆದ್ದವರು, ಸೋತವರು
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಉತ್ತರ ಕನ್ನಡದಲ್ಲಿ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಂಜಲಿ ನಿಂಬಾಳ್ಕರ್ ಅವರನ್ನು 3,37,428 ಮತಗಳಿಂದ ಸೋಲಿಸುವ ಮೂಲಕ, ರಾಜ್ಯದಲ್ಲೇ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದವರು ಎಂಬ ಖ್ಯಾತಿ ಪಡೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ವೆಂಕಟರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರು ಅವರನ್ನು 2,84,620 ಮತಗಳಿಂದ ಸೋಲಿಸಿದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ಸೌಮ್ಯಾ ರೆಡ್ಡಿ ಅವರನ್ನು 2,77,083 ಮತಗಳಿಂದ ಸೋಲಿಸಿದರು.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪಕ್ಷಾಂತರಿ ನಾಯಕರಿಂದ ಬಿಜೆಪಿಗೆ ನಷ್ಟವೇ ಹೆಚ್ಚು! ಎಡವಿದ್ದು ಎಲ್ಲೆಲ್ಲಿ? ಇಲ್ಲಿದೆ ನೋಡಿ
ತಮ್ಮ ಚೊಚ್ಚಲ ಚುನಾವಣೆಯಲ್ಲಿ ಹೃದ್ರೋಗ ತಜ್ಞ ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರದಲ್ಲಿ 2,69,647 ಮತಗಳ ಅಂತರದಿಂದ ಮೂರು ಬಾರಿ ಕಾಂಗ್ರೆಸ್ ಸಂಸದರಾಗಿದ್ದ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನು ಸೋಲಿಸಿದರು.
ಬೆಂಗಳೂರು ಉತ್ತರದಲ್ಲಿ ಸ್ಪರ್ಧಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಅವರ ವಿರುದ್ಧ 2,59,476 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.
ಬಿಜೆಪಿ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಉಡುಪಿ-ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು 2,59,175 ಮತಗಳಿಂದ ಸೋಲಿಸಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಸಹೋದರ ಬಿವೈ ರಾಘವೇಂದ್ರ ಅವರು ಶಿವಮೊಗ್ಗದಲ್ಲಿ 2,43,715 ಮತಗಳ ಅಂತರದಿಂದ ಕನ್ನಡದ ಖ್ಯಾತ ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಅವರನ್ನು 2,43,715 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಈ ಕ್ಷೇತ್ರದಲ್ಲಿ ಬಿಜೆಪಿಯ ಉಚ್ಛಾಟಿತ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಕೂಡ ಸ್ಪರ್ಧಿಸಿದ್ದರು.
ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ