
ಮಂಡ್ಯ, ನವೆಂಬರ್ 24: ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂದೆ ಸಾಗುತ್ತಿದ್ದ ಸರಕು ಸಾಗಣೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಅಪಘಾತ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬದ ಪ್ರವಾಸ ದುರಂತದಲ್ಲಿ ಅಂತ್ಯಗೊಂಡಿದೆ.
ಮೃತರನ್ನು ಮಂಡ್ಯದ ಗುತ್ತಲು ಬಡಾವಣೆಯ ಮಹದೇವು (49) ಹಾಗೂ ತೈಲೂರು ಗ್ರಾಮದ ರಿತ್ವಿಕಾ (8) ಎಂದು ಗುರುತಿಸಲಾಗಿದೆ. ಕುಟುಂಬದ ಸದಸ್ಯರು ಕಾರಿನಲ್ಲಿ ನಂಜನಗೂಡಿನ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ನಗುವಿನಹಳ್ಳಿ ಗೇಟ್ ಬಳಿಯ ಫ್ಲೈಓವರ್ ಮೇಲೆ ಮುಂದೆ ಚಲಿಸುತ್ತಿದ್ದ ಸರಕು ಸಾಗಣೆ ಲಾರಿಗೆ ಕಾರು ಹಿಂದಿನಿಂದ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮಹದೇವು ಹಾಗೂ ಬಾಲಕಿ ರಿತ್ವಿಕಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತದಲ್ಲಿ ಗೌರಿ, ಲತಾ, ಶಿವರಾಜು ಹಾಗೂ ಪ್ರಾರ್ಥನಾ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಂಜನಗೂಡಿನ ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬದ ಸದಸ್ಯರು ಅಪಘಾತಕ್ಕೂ ಮುನ್ನ ಕಾರಿನಲ್ಲೇ ರೀಲ್ಸ್ ಮಾಡಿದ್ದರು ಎನ್ನಲಾಗಿದೆ. ಈ ವಿಡಿಯೋವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿಯೂ ಹಂಚಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಕೆಲವೇ ಸಮಯದಲ್ಲಿ ಕುಟುಂಬದ ಪ್ರವಾಸ ದುರಂತದಲ್ಲಿ ಅಂತ್ಯಗೊಂಡಿರುವುದು ಸಂಬಂಧಿಕರು ಹಾಗೂ ಸ್ಥಳೀಯರಲ್ಲಿ ದುಃಖ ಮೂಡಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ