ಮಂಡ್ಯ, ಸೆಪ್ಟೆಂಬರ್ 21: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್ಗೆ (Mandya Bandh) ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ಸೇರಿದ ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್ ಮೂಲಕ ಪ್ರತಿಭಟನೆ ವ್ಯಕ್ತಪಡಿಸುವ ನಿರ್ಧಾರ ಕೈಗೊಂಡಿದೆ. ಬಂದ್ ಸಂಬಂಧ ಶುಕ್ರವಾರ ಮತ್ತೊಂದು ಸುತ್ತಿನ ಸಭೆ ಕರೆಯಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ಬಂದ್ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದೆ.
ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭೂಮಿ ತಾಯಿ ಹೋರಾಟ ಸಮಿತಿಯಿಂದ ಕೆಆರ್ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಮುತ್ತಿಗೆ ಹಾಕಲು ಬಂದಿದ್ದ ರೈತರನ್ನು ಗೇಟ್ ಬಳಿಯೇ ತಡೆದ ಪಲೀಸರು ಅವರನ್ನು ವಶಕ್ಕೆ ಪಡೆದರು. ಡ್ಯಾಂಗೆ ಮುತ್ತಿಗೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಮೊದಲೇ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಮುಖ್ಯ ಗೇಟ್ ಬಳಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆಯಿಂದ ಗೇಟ್ ಬಳಿಯೇ ರೈತರು ಪ್ರತಿಭಟನೆ ನಡೆಸಿದ್ದಾರೆ. ರೈತ ನಾಯಕ ನಂಜುಂಡೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಇದನ್ನೂ ಓದಿ: ಮಂಡ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ; ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಈ ಮಧ್ಯೆ, ರೈತರ ಪ್ರತಿಭಟನೆ ತೀವ್ರಗೊಂಡಿರುವ ಕಾರಣ ಗುಪ್ತಚರ ಇಲಾಖೆಯ ಮೈಸೂರು ವಿಭಾಗದ ಎಸ್ಪಿ ಜಯಪ್ರಕಾಶ್ ಅವರು ಜಲಾಶಯಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ಜಲಾಶಯದಿಂದ ನೀರು ಹರಿಸುತ್ತಿರುವುದರಿಂದ ಹೋರಾಟ ತೀವ್ರಗೊಂಡಿದೆ. ಹೀಗಾಗಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಎಸ್ಪಿ ಜಯಪ್ರಕಾಶ್ ಅವರು ಜಲಾಶಯದ ನೀರಿನ ಮಟ್ಟ, ಹೊರಹರಿವು, ಒಳಹರಿವಿನ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಅದೇ ರೀತಿ ಜಲಾಶಯದಲ್ಲಿ ಸೀಪೇಜ್ ಇದೆಯಾ ಎಂಬುದರ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ನಂತರ ಹಿರಿಯ ಅಧಿಕಾರಿಗಳಿಗೆ ವರದಿ ಕಳುಹಿಸಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ