ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ: ಕೆಆರ್​ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ, 1500 ಪೊಲೀಸ್ ಸಿಬ್ಬಂದಿ ನಿಯೋಜನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಬಿಜೆಪಿ ನಾಯಕರು ಇಂದು ಕೆಆರ್​ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಅಹಿತಕರ ಘಟನೆ ತಡೆಯಲು ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ: ಕೆಆರ್​ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ, 1500 ಪೊಲೀಸ್ ಸಿಬ್ಬಂದಿ ನಿಯೋಜನೆ
ಕೆಆರ್​ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ
Image Credit source: tv9
Edited By:

Updated on: Jul 31, 2026 | 10:32 AM

ಮುಖ್ಯಾಂಶಗಳು

  • ಇಂದು ಕೆಆರ್​ಎಸ್ ಡ್ಯಾಂಗೆ ಬಿಜೆಪಿ ನಾಯಕರಿಂದ ಮುತ್ತಿಗೆ
  • ಬೃಂದಾವನ ಉದ್ಯಾನವನಕ್ಕೆ ಸಾರ್ವಜನಿಕರಿಗಿಲ್ಲ ಎಂಟ್ರಿ
  • ಮಂಡ್ಯದಾದ್ಯಂತ ಭಾರೀ ಪ್ರತಿಭಟನೆ

ಮಂಡ್ಯ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವ ಆದೇಶದ ವಿರುದ್ಧ ಮಂಡ್ಯ ಜಿಲ್ಲೆಯಲ್ಲಿ ಹೋರಾಟ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ. ಈ ಪ್ರತಿಭಟನೆಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಮತ್ತು ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ಬಿಜೆಪಿ ನಾಯಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮೂರುವರೆ ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಆದೇಶಿಸಿದ ನಂತರ ಮಂಡ್ಯದಲ್ಲಿ ರೈತರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಆದೇಶದ ವಿರುದ್ಧ ಧ್ವನಿ ಎತ್ತಿರುವ ಬಿಜೆಪಿ ನಾಯಕರು, ಇಂದು ಬೆಳಗ್ಗೆ 11 ಗಂಟೆಗೆ ಕೆಆರ್​ಎಸ್ ಜಲಾಶಯದ ಬಳಿ ಪ್ರತಿಭಟನೆ ಆರಂಭಿಸಿ, ನಂತರ ಅಣೆಕಟ್ಟಿಗೆ ಮುತ್ತಿಗೆ ಹಾಕಲಿದ್ದಾರೆ.

ಮಂಡ್ಯದಾದ್ಯಂತ ಪೊಲೀಸ್ ಸರ್ಪಗಾವಲು

ಅಹಿತಕರ ಘಟನೆಗಳನ್ನು ತಡೆಯಲು ಅಧಿಕಾರಿಗಳು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೆಆರ್​ಎಸ್ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಒಟ್ಟು ಒಂದೂವರೆ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಬ್ಬರು ಎಸ್‌ಪಿ, ಒಂಬತ್ತು ಡಿವೈಎಸ್‌ಪಿ, ಇಪ್ಪತ್ತೇಳು ಇನ್ಸ್‌ಪೆಕ್ಟರ್‌ಗಳು, ನಲವತ್ತೈದು ಪಿಎಸ್‌ಐ ಮತ್ತು ಎಪ್ಪತ್ತೆಂಟು ಎಎಸ್‌ಐಗಳನ್ನು ಒಳಗೊಂಡಂತೆ ಭಾರಿ ಸಂಖ್ಯೆಯ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಮಾಹಿತಿ ನೀಡಿದ್ದಾರೆ.

ಬೃಂದಾವನ ಉದ್ಯಾನವನಕ್ಕೆ ಸಾರ್ವಜನಿಕರಿಗಿಲ್ಲ ಎಂಟ್ರಿ

Cauvery Water Row: ಮಂಡ್ಯದಲ್ಲಿ ಭುಗಿಲೆದ್ದ ಕಾವೇರಿ ಹೋರಾಟ | ಇಂದು ಕೆಆರ್​ಎಸ್​ಗೆ ಬಿಜೆಪಿ ನಾಯಕರಿಂದ ಮುತ್ತಿಗೆ
ಜಲಾಶಯದ ಸುತ್ತಮುತ್ತ ಬ್ಯಾರಿಕೇಡ್‌ಗಳನ್ನು ಹಾಕಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕೆಆರ್​ಎಸ್‌ನ ಬೃಂದಾವನ ಉದ್ಯಾನವನಕ್ಕೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಲಾಗಿದೆ. ಪೊಲೀಸರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಹೆಚ್ಚಿನ ಕಟ್ಟೆಚ್ಚರ ವಹಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರು ಬಿಡಲು ವಿರೋಧ: ಮಂಡ್ಯದಲ್ಲಿ ರೈತರ ಆಕ್ರೋಶ, ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು

ಮಂಡ್ಯ ಜಿಲ್ಲಾದ್ಯಂತ ಕಾವೇರಿ ಹೋರಾಟದ ಕಿಚ್ಚು ಭುಗಿಲೆದ್ದಿದೆ. ಬಿಜೆಪಿ ನಾಯಕರಲ್ಲದೆ, ರೈತ ಸಂಘಟನೆಗಳು ಮತ್ತು ಇತರ ವಿವಿಧ ಸಂಘಟನೆಗಳು ಕೂಡ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಹೋರಾಟವನ್ನು ಮುಂದುವರಿಸಿವೆ. ಇಂತಹ ಪರಿಸ್ಥಿತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಮತ್ತು ಯಾವುದೇ ಸಂಘರ್ಷಗಳಿಗೆ ಅವಕಾಶ ನೀಡದಿರುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಜಿಲ್ಲೆಯಾದ್ಯಂತ ಭದ್ರತಾ ಕ್ರಮಗಳನ್ನು ಬಲಪಡಿಸಲಾಗಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಶೋಭಾರಾಣಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:17 am, Fri, 31 July 26

ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Loading...
Unable to load recommendations.
Follow Us