ಮಂಡ್ಯ, ಸೆಪ್ಟೆಂಬರ್ 12: ತಮಿಳುನಾಡಿಗೆ (Tamil Nadu) 15 ದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತೆ ಆದೇಶ ಸೂಚನೆ ನೀಡಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದೆ. ಮಂಡ್ಯದಲ್ಲಿ ಮಂಗಳವಾರ ಸಂಜೆ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸಂಜಯ ವೃತ್ತದಲ್ಲಿ ರೈತರು, ಕನ್ನಡ ಪರ ಸಂಘಟನೆಗಳ ಸದಸ್ಯರು ಧರಣಿ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ಸೂಕ್ತ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕೇಂದ್ರದ ಮಲತಾಯಿ ಧೋರಣೆ ಇನ್ನೂ ಮುಂದುವರಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಸಂಪೂರ್ಣ ಅವೈಜ್ಞಾನಿಕವಾಗಿದೆ. ಸಮಿತಿಯು ಕರ್ನಾಟಕದ ರೈತರು, ಜನರ ಕತ್ತು ಕೊಯ್ಯುವ ಆದೇಶ ನೀಡಿದೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು. ಅಳಿದುಳಿದ ನೀರು ಉಳಿಸಿಕೊಳ್ಳುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು. ರಾಜ್ಯದ ಸಂಸದರು ಇಷ್ಟು ದಿನದ ಮೌನವನ್ನು ಮುರಿಯಲೇಬೇಕು. ರಾಜ್ಯದ ಜನತೆ, ರೈತರ ಮತದಿಂದ ಅಧಿಕಾರಕ್ಕೆ ಬಂದಿರುವವರು ನೀವು. ನೀವು ತಿನ್ನುತ್ತಿರುವ ಅನ್ನ ರೈತರದ್ದು ಎಂಬುದನ್ನು ಮೊದಲು ಅರಿತುಕೊಳ್ಳಿ ಎಂದು ಪ್ರತಿಭಟನಾ ನಿರತ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಸರ್ಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ಧ ಬುಧವಾರದಿಂದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಂಡ್ಯದಲ್ಲಿ ಪ್ರತಿಭಟನೆ ವೇಳೆ ರೈತ ನಾಯಕಿ ಸುನಂದಾ ಜಯರಾಂ ತಿಳಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶ
ಈ ಮಧ್ಯೆ, ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್, ಕೃಷಿ ಸಚಿವ ಚಲುವರಾಯ ಸ್ವಾಮಿ, ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವ ನಾಗೇಂದ್ರ, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಎಸಿಎಸ್ ರಜನೀಶ್ ಗೋಯಲ್, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:34 pm, Tue, 12 September 23