ಅಸೆಂಬ್ಲಿ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸೋಲ್ವಂತೆ; ಹೆಚ್ಡಿ ಕುಮಾರಸ್ವಾಮಿ ಕಾರಣ ತಿಳಿಸಿದರು
ನಿಖಿಲ್ ಕುಮಾರಸ್ವಾಮಿ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ರಾಜ್ಯದ ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಭಾರತೀನಗರಕ್ಕೆ ತೆರಳುತ್ತಿದ್ದ ಹೆಚ್ಡಿಕೆಯವರನ್ನು ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಡಿ.ಸಿ.ತಮ್ಮಣ್ಣ ಹಾಗೂ ನೂರಾರು ಜೆಡಿಎಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ, ಚನ್ನಪಟ್ಟಣ ಹಾಗೂ ಇತರೇ ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಅವರ ತಾಯಿ ಅನಿತಾ ಕುಮಾರಸ್ವಾಮಿ ಅವರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ನಿಖಿಲ್ ಅವರು ಸದ್ಯ ಪಕ್ಷ ಸಂಘಟನೆಯಲ್ಲಿ ಮಾತ್ರ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಆದರೆ ನಿಖಿಲ್ ಯಾವುದೇ ಕಾರಣಕ್ಕೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದರು.
ಇನ್ನು ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್ ಜಲಾಶಯದ ಆಸುಪಾಸಿನಲ್ಲಿ ಸೋಮವಾರದಿಂದ ರಾಜ್ಯ ಸರ್ಕಾರ ಟ್ರಯಲ್ ಬ್ಲಾಸ್ಟ್ ಗೆ ಮುಂದಾಗಿತ್ತು. ಆದರೆ ರೈತರು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಾತ್ಕಾಲಿಕವಾಗಿ ಮುಂದೂಡಿದೆ ಎಂಬ ಪ್ರಶ್ನೆಗೆ ಉತ್ತರ ನೀಡಿದ ಹೆಚ್ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಆದರೆ ರೈತರು ತೀವ್ರ ವಿರೋಧ ಒಡ್ಡಿದಕ್ಕೆ ಬ್ಲಾಸ್ಟಿಂಗ್ ನಿಲ್ಲಿಸಿದೆ. ಅಲ್ಲಿ ಟ್ರಯಲ್ ಬ್ಲಾಸ್ಟಿಂಗ್ ಮಾಡಬೇಕೋ ಬೇಡವೋ ಎಂಬುದು ಅಲ್ಲಿನ ಪರಿಸ್ಥಿತಿಯ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯ ಸರ್ಕಾರ ಪರಿಸ್ಥಿತಿ ಮತ್ತು ವಾಸ್ತವ ತಿಳಿದುಕೊಂಡು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಹೆಚ್ಡಿಕೆ ಹೇಳಿಕೆ ನೀಡಿದರು.
ಇನ್ನು ಒಕ್ಕಲಿಗ ಸಮುದಾಯದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಎದುರಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅಧಿಕಾರಕ್ಕೆ ಬರಲು ರಾಜ್ಯದ ಜನತೆ ತೀರ್ಮಾನ ಮಾಡಬೇಕೆ ಹೊರತು ಯಾರೋ ತೀರ್ಮಾನ ಮಾಡೋದಲ್ಲ. ಮುಂದಿನ ದಿನಗಳಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ವಿರೋಧಿಗಳಿಗೆ ಟಕ್ಕರ್ ನೀಡಿದರು.