ರಾಮನಗರದಲ್ಲಿ ಮ್ಯಾನ್‌ಹೋಲ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಅಶ್ವತ್ಥ್ ನಾರಾಯಣ
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಹೇಳಿದರು.
ಬೆಂಗಳೂರು: ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್‌ಹೋಲ್‌ಗೆ ಇಳಿದು ಜೀವ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದ್ದು, ಸರಕಾರದ ವತಿಯಿಂದ ತಕ್ಷಣವೇ ಪರಿಹಾರ ಘೋಷಣೆ ಮಾಡಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಅಸುನೀಗಿದ್ದಾರೆ.
ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ 18.5 ಲಕ್ಷ ರೂಪಾಯಿ ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಸರಕಾರ ತಕ್ಷಣವೇ ಪ್ರಕಟಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಈ ವಿಷಯವನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ.
ಘಟನೆ ವಿಷಯ ತಿಳಿದ ಕೂಡಲೇ ಜಿಲ್ಲಾಧಿಕಾರಿ ರಾಕೇಶ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಿಸಿಎಂ, ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದರು. ಅಲ್ಲದೆ, ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸಬಾರದು. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
40 ಕೋಟಿ ರೂ.ಗಳಷ್ಟು ಬ್ಲ್ಯಾಕ್ ಫಂಗಸ್ ಔಷಧಿ ಖರೀದಿ ಕಪ್ಪು ಶಿಲೀಂದ್ರ ಕಾಯಿಲೆ ಬಗ್ಗೆ ಸರಕಾರ ಹೆಚ್ಚು ಕಾಳಜಿ ವಹಿಸಿದ್ದು, ಮೂರು ದಿನಗಳ ಹಿಂದೆ 40 ಕೋಟಿ ರೂ.ಗಳಷ್ಟು ಮೊತ್ತದ ಔಷಧಿ ಖರೀದಿಗೆ ರಾಜ್ಯ ಸರಕಾರ ಆದೇಶ ನೀಡಿದೆ. ಆ ಔಷಧಿಗಳ ಪೂರೈಕೆ ಕೂಡ ಶುಕ್ರವಾರ ದಿಂದ ಆರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಇಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಈವರೆಗೆ ವರದಿಯಾಗಿರುವುದು 800 ಪ್ರಕರಣಗಳು. ಇದಲ್ಲದೆ 700 ಪ್ರಕರಣಗಳ ಬಗ್ಗೆ ಶಂಕೆ ಇದೆ. ಆದರೂ ಸರಕಾರ ಇಷ್ಟು ದೊಡ್ಡ ಪ್ರಮಾಣದಲ್ಲಿ ಔಷಧಿ ಖರೀದಿ ಮಾಡುತ್ತಿದೆ. ಹೀಗಾಗಿ ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಪಶ್ಚಿಮ ವಲಯದಲ್ಲಿ ಯಶಸ್ವಿ ವ್ಯಾಕ್ಸಿನೇಷನ್; 45 ವರ್ಷ ಮೇಲ್ಪಟ್ಟ 1 ಲಕ್ಷ ಜನಕ್ಕೆ ಲಸಿಕೆ ಕೊಟ್ಟರೆ ಮೊದಲ ಡೋಸ್ ಪೂರ್ಣ